ಪರೀಕ್ಷಾ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಿ
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸಿದ್ಧತಾ ಸಭೆ
Team Udayavani, Mar 22, 2022, 4:09 PM IST
ಕೊಪ್ಪಳ: ಜಿಲ್ಲಾದ್ಯಂತ ಮಾ. 28ರಿಂದ ಏ. 11ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡದೆ, ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನ್ಯಾಯಯುತ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-2022 ರ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಒದಗಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಗುರುತಿನ ಚೀಟಿ ಹಾಗೂ ಪರೀಕ್ಷಾ ಪ್ರವೇಶ ಪತ್ರ ಇದ್ದವರು ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು. ನಿಷೇಧಾಜ್ಞೆ ನಿಯಮ ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ಧ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ದೂರು ದಾಖಲಿಸಬಹುದು. ಆದ್ದರಿಂದ ಜಾರಿಯಲ್ಲಿರುವ ಕಾನೂನು ನಿಯಮಗಳನ್ನು ಬಳಸಿಕೊಂಡು ನ್ಯಾಯಯುತ ಪರೀಕ್ಷೆ ನಡೆಸುವುದು ಕೇಂದ್ರದ ಮುಖ್ಯಸ್ಥರ ಜವಾಬ್ದಾರಿ ಎಂದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ಬೆಂಚ್, ಪೀಠೊಪಕರಣ, ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ವ್ಯವಸ್ಥೆ ಮುಂತಾದವುಗಳ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಸ್ಯಾನಿಟೈಸರ್ ಸಿಂಪಡಣೆ ಬಗ್ಗೆ ಸ್ಥಳೀಯ ಗ್ರಾಪಂಗಳಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದು, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಕೋವಿಡ್ ಲಕ್ಷಣವುಳ್ಳ ವಿದ್ಯಾರ್ಥಿಗಳು ಕಂಡುಬಂದರೆ ಅವರಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳ ಕಾರಿಡಾರ್ ಹಾಗೂ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಸರ್ಕಾರದಿಂದ ನಿರ್ದೇಶನಗಳಿದ್ದು, ಪರೀಕ್ಷೆಗಳ ನಂತರ ಸಿಸಿ ಟಿವಿಯಲ್ಲಿ ರೆಕಾರ್ಡಿಂಗ್‌ನ್ನು ಸಿಡಿ ರೂಪದಲ್ಲಿ ದಾಖಲಿಸಿ, ಸೀಲ್ ಮಾಡಿ ಖಜಾನೆಗೆ ಸಲ್ಲಿಸಬೇಕು ಎಂದರು.
ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ವ್ಯವಸ್ಥಿತ ಮಾರ್ಗ ನಕ್ಷೆಯನ್ನು ತಯಾರಿಸಿ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಣೆ ವಾಹನಗಳೊಂದಿಗೆ ನಿಯೋಜಿತ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಇರುವುದು ಕಡ್ಡಾಯ. ಪರೀಕ್ಷಾ ಪ್ರಕ್ರಿಯೆಯಲ್ಲಿ ವಿವಿಧ ಕರ್ತವ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ, ಕಾರ್ಯನಿರ್ವಹಿಸಬೇಕು ಎಂದರು.
ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿ, ಜಿಲ್ಲೆಯಲ್ಲಿ 85 ರೆಗ್ಯೂಲರ್ ವಿದ್ಯಾರ್ಥಿಗಳು ಹಾಗೂ 7 ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 92 ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. 2022ನೇ ಸಾಲಿನಲ್ಲಿ 23,072 ರೆಗ್ಯೂಲರ್ ವಿದ್ಯಾರ್ಥಿಗಳು, 206 ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 2201 ಬಾಹ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 25,479 ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ್ದು, ಜಿಲ್ಲೆಯಲ್ಲಿ 7 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗುವುದು. ಜಿಲ್ಲೆಯಲ್ಲಿ ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಣಿಕೆ, ಪರೀಕ್ಷಾ ಕೇಂದ್ರದ ಮೇಲ್ವಿಚಾರಣೆ ಮುಂತಾದ ಕರ್ತವ್ಯಗಳಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜಿಸಲಾಗುವುದು. ನಿಯೋಜಿತ ಸಿಬ್ಬಂದಿಗೆ ಪರೀಕ್ಷಾ ಪ್ರಕ್ರಿಯೆ ಕುರಿತು ಸೂಕ್ತ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತಕುಮಾರ್ ಎನ್., ಎಡಿಸಿ ಎಂ.ಪಿ. ಮಾರುತಿ, ಜಿಪಂ ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಡಿಎಚ್‌ಒ ಡಾ| ಅಲಕನಂದಾ ಮಳಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಸೇರಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.