ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ: ಡಿ.ಕೆ. ಶಿವಕುಮಾರ್ ಕಿಡಿ
ಬಿಬಿಎಂಪಿ ಚುನಾವಣೆ ; ಬೆಂಗಳೂರಿನಲ್ಲಿ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ
Team Udayavani, Aug 7, 2022, 4:34 PM IST
ಬೆಂಗಳೂರು: ಬೆಂಗಳೂರಿನಲ್ಲಿ ನಾವು ಸಮೀಕ್ಷೆ ಮಾಡಿದ್ದು ಜನ ದೊಡ್ಡ ಬದಲಾವಣೆಯನ್ನು ಬಯಸಿದ್ದು ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದ್ದು, ಚುನಾವಣೆ ಎದುರಿಸಲು ತಯಾರಿ ನಡೆಸುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ನಮ್ಮ ಕರ್ತವ್ಯ.ಹಿಂದುಳಿದವರು, ಪರಿಶಿಷ್ಟರು, ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಬೊಮ್ಮನಹಳ್ಳಿ ಕ್ಷೇತ್ರದ 14 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಜಯನಗರದಲ್ಲಿ ಒಂಬತ್ತಕ್ಕೆ ಎಂಟು ವಾರ್ಡ್, ಬಿಟಿಎಂ ಲೇಔಟ್ ನಲ್ಲಿ 8 ವಾರ್ಡ್ ಹಾಗೂ ಗಾಂಧಿ ನಗರದಲ್ಲಿ 7 ಕ್ಕೆ 7 ವಾರ್ಡ್ ಗಳಲ್ಲಿ, ಚಾಮರಾಜಪೇಟೆಯ 6 ವಾರ್ಡ್ ಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಒಟ್ಟು 93 ವಾರ್ಡ್ ಗಳ ಪೈಕಿ 76 ಕಡೆ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ. ಇದು ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ ಎಂದರು.
ನೆಹರು ಅವರು ಕೂಡ ಅಲಹಾಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.ವಿಲಾಸ್ ರಾವ್ ದೇಶ್ ಮುಖ್ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಬಿ.ಡಿ ಜತ್ತಿ ಅವರೂ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಈಗಿನ ರಾಷ್ಟ್ರಪತಿಗಳು ಕೂಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಭವಿಷ್ಯದಲ್ಲಿ ಶಾಸಕರಾಗುವವರಿಗೆ ಇದು ಬಹುಮುಖ್ಯ ಚುನಾವಣೆ ಎಂದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಯತ್ನ ಮಾಡಿದರು.
ಒಂದು ಕಾಲದಲ್ಲಿ ಬಸವನಗುಡಿ, ರಾಜಾಜಿನಗರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಎಸ್.ಎಂ. ಕೃಷ್ಣ ಅವರ ಸರ್ಕಾರದ ನಂತರ ನಮ್ಮ ಪಕ್ಷದವರು ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ನಂತರ ಶಾಸಕರಾದ ಇತಿಹಾಸ ಇದೆ ಎಂದರು.
ನಾವು ಮಹಿಳೆಯರಿಗೆ ಮೀಸಲಾತಿ ವಿರೋಧಿಸುವುದಿಲ್ಲ. ಅವರಿಗೆ ರಾಜಕೀಯ ಶಕ್ತಿ ನೀಡಬೇಕೆಂಬುದು ನಮ್ಮ ಉದ್ದೇಶ. ಆದರೆ ಅವಕಾಶವನ್ನು ಸಮಾನವಾಗಿ ಹಂಚಬೇಕು. ಆದರೆ ಮೀಸಲಾತಿಯನ್ನು ಒಂದು ಕಡೆಗೆ ಕೇಂದ್ರೀಕರಿಸಿರುವುದು ಬಹಳ ಅನ್ಯಾಯ. ಈ ಬಗ್ಗೆ ಹೋರಾಟ ಮುಂದುವರಿಸಿ, ಅಕ್ಷೇಪ ಸಲ್ಲಿಸಿ ಎಂದು ನಾವು ತಿಳಿಸಿದ್ದೇವೆ. ಮತದಾರರ ಪಟ್ಟಿಯಿಂದ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಮತದಾರರನ್ನು ತೆಗೆದುಹಾಕಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ ಪಟ್ಟಿ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಪ್ರತ್ಯೇಕ ಸಭೆ ಮಾಡುತ್ತೇವೆ ಎಂದರು.
75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲು ನಮ್ಮೆಲ್ಲರಿಗೂ ಅವಕಾಶ ಸಿಕ್ಕಿದೆ. ಆ. 15 ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ರಾಷ್ಟ್ರಧ್ವಜ ಹಿಡಿದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ.ಸಂಜೆ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದು ರಾಜಕೀಯೇತರ ಕಾರ್ಯಕ್ರಮ. ಇದರಲ್ಲಿ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ನೌಕರರು, ಕಲಾವಿದರು, ಬೇರೆ ಬೇರೆ ಕ್ಷೇತ್ರಗಳ ಎಲ್ಲರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದರು.
ಈಗಾಗಲೇ ಸುಮಾರು 29,000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಣಿ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ರೈಲ್ವೇ ಸೇವೆ ಹಾಗೂ ಮೆಟ್ರೋ ಮಾರ್ಗಗಳನ್ನು ಬಳಸಿಕೊಳ್ಳಬೇಕು. ಆದಷ್ಟು ವಾಹನ ಬಳಕೆ ಕಡಿಮೆ ಮಾಡಬೇಕು.
ಆಗಸ್ಟ್ 15 ರಂದು ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ವಿನಾಯಿತಿ ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ.
ಇದು ಈ ದೇಶದ ಸ್ವಾತಂತ್ರ್ಯದ ಹಬ್ಬವಾಗಿದೆ. ಇದನ್ನು ಸಂಭ್ರಮದಿಂದ ಆಚರಿಸಬೇಕು. ಈ ಅವಕಾಶ ನಿಮಗೆ ಮತ್ತೆ ಸಿಗುವುದಿಲ್ಲ ಎಂದರು.
ಬಿಜೆಪಿ ಸ್ನೇಹಿತರು ಮನೆಮನೆಗೂ ರಾಷ್ಟ್ರಧ್ವಜವನ್ನು 25 ರೂಪಾಯಿ ನಿಗದಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ರಾಷ್ಟ್ರಧ್ವಜ ನೀಡಬಹುದಿತ್ತು. ನೋಂದಣಿ ಮಾಡಿಕೊಂಡವರಿಗೆ ನಾವು 1.5 ಲಕ್ಷ ರಾಷ್ಟ್ರಧ್ವಜ, ಟೋಪಿ, ಟಿ ಶರ್ಟ್ ಉಚಿತವಾಗಿ ನೀಡುತ್ತೇವೆ. ಅನೇಕರು ಸ್ತಬ್ಧ ಚಿತ್ರಗಳನ್ನು ಮಾಡಲು ಮುಂದಾಗಿದ್ದಾರೆ. ಕಲಾವಿದರೂ ತಮ್ಮ ಪ್ರತಿಭೆ ಪ್ರದರ್ಶಿಸಬಹುದು. ಇದರಲ್ಲಿ ಭಾಗವಹಿಸುವವರಿಗೆ ಪ್ರಮಾಣಪತ್ರ ನೀಡಲಾಗುವುದು.
ಈ ಕಾರ್ಯಕ್ರಮ ಮಾಡಲು ಅನುಮತಿ ನೀಡಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಈ ಕಾರ್ಯಕ್ರಮ ಮಾಡುವಂತೆ ಎಐಸಿಸಿ ನಾಯಕರೇ ಸೂಚಿಸಿದ್ದು, ಅವರಿಗೆ ಆಹ್ವಾನ ನೀಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಕಾರ್ಯಕ್ರಮ ನಡೆಯಲಿದ್ದು, ಯಾರು ಬರಬೇಕು ಎಂದು ಅವರೇ ತೀರ್ಮಾನ ಮಾಡುತ್ತಾರೆ. ನಮ್ಮ ರಾಜ್ಯಕ್ಕೆ ಯಾರು ಬರುತ್ತಾರೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದರು.
ಬಿಬಿಎಂಪಿ ವಾರ್ಡ್ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ಆಕ್ಷೇಪಣೆ ಸಲ್ಲಿಸಲಿ ಎಂಬ ಬಿಜೆಪಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ ವಾರ್ಡ್ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೇಪಗಳು ವ್ಯಕ್ತವಾಗಿದ್ದು, ಅದರಲ್ಲಿ ಒಂದು ಆಕ್ಷೇಪಣೆಗೂ ಸರ್ಕಾರ ಸ್ಪಂದಿಸಿಲ್ಲ. ಯಾರ ಅಭಿಪ್ರಾಯವನ್ನೂ ಆಲಿಸದೆ ಸರ್ಕಾರ ಎಲ್ಲ ಆಕ್ಷೇಪಗಳನ್ನು ವಜಾಗೊಳಿಸಿದೆ. ಬಿಜೆಪಿ ಶಾಸಕರು, ಸಂಸದರು ಸಂಘ ಪರಿವಾರದ ಕಚೇರಿಗಳಲ್ಲಿ ಈ ತೀರ್ಮಾನಗಳನ್ನು ತೆಗೆದುಕೊಂಡಿದ್ದು, ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲವಾಗಿದೆ. ಇದು ಅನ್ಯಾಯ ಅಲ್ಲವೇ? ಆಕ್ಷೇಪಗಳನ್ನು ಕೇಳುವ ಸೌಜನ್ಯ ಬೇಡವೇ?’ ಎಂದು ಪ್ರಶ್ನಿಸಿದರು.
ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ‘ ಅವರು ಏನಾದರೂ ಮಾಡಿಕೊಳ್ಳಲಿ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ ತಕ್ಷಣವೇ ಚುನಾವಣೆ ನಡೆಸುತ್ತಿದ್ದರು. ಈಗ ಕಾಲಹರಣ ಮಾಡಿದ್ದಾರೆ. ಚುನಾವಣೆ ನಡೆಸಲು ಅವರಿಗೆ ಸೋಲಿನ ಭಯ ಇದೆ. ನಮ್ಮ ಸಮೀಕ್ಷೆ ಪ್ರಕಾರ ಜನ ನಮ್ಮ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ ‘ ಎಂದು ತಿಳಿಸಿದರು.
ಕಾಂಗ್ರೆಸ್ ಕಾಲದಲ್ಲಿ ಮಾಡಿದ ಮೀಸಲಾತಿ ವಿಚಾರ ಬಿಚ್ಚಿಡಬೇಕೆ ಎಂಬ ಬಿಜೆಪಿ ನಾಯಕರ ಸವಾಲಿನ ಕುರಿತು ಕೇಳಿದಾಗ, ‘ ಅವರು ಏನು ಬಿಚ್ಚಿಡುತ್ತಾರೋ ಬಿಚ್ಚಿಡಲಿ,, ಬಹಳ ಸಂತೋಷ’ ಎಂದರು.
ಮತದಾರರ ಪಟ್ಟಿಯಿಂದ ಎಷ್ಟು ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂಬ ಪ್ರಶ್ನೆಗೆ, ‘ ಇಡೀ ರಾಜ್ಯಾದ್ಯಂತ ಎಷ್ಟು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ ಎಂಬ ಅಧಿಕೃತ ದಾಖಲೆ ನಮ್ಮ ಬಳಿ ಇವೆ. ನಾವದನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ‘ ಎಂದು ತಿಳಿಸಿದರು.
ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ವಿಚಾರ ಚರ್ಚೆ ಬಗ್ಗೆ ಕೇಳಿದಾಗ, ‘ ಇದಕ್ಕೂ ನಮಗೂ ಸಂಬಂಧವಿಲ್ಲ. ಅವರು ಯಾರನ್ನಾದರೂ ಮುಖ್ಯಮಂತ್ರಿ, ಮಂತ್ರಿ ಮಾಡಿಕೊಳ್ಳಲಿ. ಅದು ಅವರಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಭ್ರಷ್ಟಾಚಾರ ಹೆಚ್ಚಾಗಿದೆ. ಉತ್ತಮ ಆಡಳಿತ ನೀಡಿ ಜನರಿಗೆ ನ್ಯಾಯ ಒದಗಿಸಿಕೊಡುವುದು ನಮ್ಮ ಗುರಿ ‘ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.