ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ
Team Udayavani, Nov 15, 2022, 4:15 PM IST
ಚಿಕ್ಕಮಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ರಿಂದ 145 ಶಾಸಕ ಸ್ಥಾನಗಳನ್ನು ಗೆದ್ದು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಕಡೂರುವಿನಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜಿ ಅವರ ಮೇಲಿನ ವಿಶ್ವಾಸಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ ಎಂದರು. ಚುನಾವಣೆಗೆ ಇನ್ನು ಕೇವಲ 4 ತಿಂಗಳಷ್ಟೇ ಬಾಕಿ ಇದೆ. ಚಿಕ್ಕಮಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲಿದ್ದಾರೆ ಎಂದರು.
1 ಲಕ್ಷ ಸಾಲ ಮನ್ನಾ, ಆಯುಷ್ಮಾನ್ ಯೋಜನೆ, ಫಸಲ್ ವಿಮೆ ಯೋಜನೆ, ಮೆಗಾ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಹಣ, ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ಪರಿಹಾರ ಕೊಡುಗೆ ಸೇರಿ ಅನೇಕ ಜನಪರ ಯೋಜನೆ ಜಾರಿ ಮಾಡಿದ್ದನ್ನು ಅವರು ನೆನಪಿಸಿದರು. ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿ 20 ಲಕ್ಷಕ್ಕೂ ಹೆಚ್ಚು ಜನ ಹೆಣ್ಮಕ್ಕಳಿಗೆ ನೆರವಾಗಿದ್ದೇನೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಚ್ಚುವರಿ ಹಣ ಕೊಟ್ಟಿದ್ದೇವೆ. ಇದನ್ನು ಕುಂತಲ್ಲಿ- ನಿಂತಲ್ಲಿ ಮಾತನಾಡಿ ಜನರಿಗೆ ತಿಳಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಆ ಪಕ್ಷಕ್ಕೆ ಜನರು ಬೆಂಬಲ ನೀಡುವುದಿಲ್ಲ ಎಂದ ಅವರು, ಬಿಜೆಪಿ ಗೆಲುವು ನಿಶ್ಚಿತ ಎಂದು ನುಡಿದರು. ಜಗದ್ವಂದ್ಯ ನಾಯಕ ನರೇಂದ್ರ ಮೋದಿಜಿ ಅವರೆದುರು ನಿಲ್ಲುವಂಥ ನಾಯಕ ಕಾಂಗ್ರೆಸ್ ಪಕ್ಷದಲ್ಲಿಲ್ಲ ಎಂದು ತಿಳಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ನಡೆದಿದೆ. ಇದರ ಆರಂಭದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಡೆದಿತ್ತು. ಮೋದಿಜಿ ಮತ್ತು ಕರ್ನಾಟಕ ಬಿಜೆಪಿ ಸರಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಈ ಜೋಡೋ ಯಾತ್ರೆಯ ಉದ್ದೇಶ ಏನಾಗಿತ್ತು ಎಂದು ಡಿ.ಕೆ.ಶಿವಕುಮಾರ್- ಸಿದ್ದರಾಮಯ್ಯ ಉತ್ತರಿಸಲಿ ಎಂದು ಒತ್ತಾಯಿಸಿದರು.
ಕೇಂದ್ರ- ರಾಜ್ಯದ ಸಚಿವರು, ಶಾಸಕರಾದ ಬೆಳ್ಳಿ ಪ್ರಕಾಶ್, ಎಂ.ಪಿ.ಕುಮಾರಸ್ವಾಮಿ, ಜಿಲ್ಲಾ ಅಧ್ಯಕ್ಷ ಕಲ್ಮರುಡಪ್ಪ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.