![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 12, 2024, 7:50 AM IST
ಮಂಗಳೂರು: ಧಾರಾವಾಹಿ ಕಾಲ್ಪನಿಕ ಇರಬಹುದು, ಆದರೆ ಅದರ ಪ್ರಭಾವ ನೇರವಾಗಿ ಜನರ ಮೇಲಾಗುವುದಿಲ್ಲವೇ? ಹಾಗಿರುವಾಗ ಧಾರಾವಾಹಿ ನಿರ್ಮಿಸುವವರು ಎಚ್ಚರ ವಹಿಸಬೇಕಲ್ಲವೇ?
ಇಂತಹ ಜಿಜ್ಞಾಸೆ ಹುಟ್ಟು ಹಾಕಿರುವ ಅಪರೂಪದ ಪ್ರಕರಣ ನಡೆದಿದೆ. ಧಾರಾವಾಹಿಯ ದೃಶ್ಯವೊಂದರಲ್ಲಿ ನಟಿಯೊಬ್ಬರು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ್ದಕ್ಕಾಗಿ ಪೊಲೀಸರು “ದಂಡ’ ವಿಧಿಸಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಸೀತಾರಾಮ’ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯದಲ್ಲಿ ಸ್ಕೂಟರ್‌ನಲ್ಲಿ ಇಬ್ಬರು ಸಂಚರಿಸುವ ದೃಶ್ಯವಿತ್ತು. ಅದರಲ್ಲಿ ಸವಾರೆ ಹೆಲ್ಮೆಟ್ ಧರಿಸಿದ್ದರೆ ಹಿಂಬದಿ ಕುಳಿತಾಕೆ ಹೆಲ್ಮೆಟ್ ಧರಿಸಿರಲಿಲ್ಲ.
ಟಿವಿಯಲ್ಲಿ ಪ್ರಸಾರವಾದ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ, ಧಾರಾವಾಹಿಯಲ್ಲಿ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ನಟ-ನಟಿಯರು ಸಂಚಾರ ನಿಯಮ ಉಲ್ಲಂಘಿಸುವುದು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಆ ನಟಿ, ಧಾರಾವಾಹಿಯ ನಿರ್ದೇಶಕ ಮತ್ತು ಪ್ರಸಾರ ಮಾಡಿದ ವಾಹಿನಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದರು.
ಪೊಲೀಸ್ ಆಯುಕ್ತರು ಮಂಗಳೂರು ಸಂಚಾರ ಪೂರ್ವ ಠಾಣೆಗೆ ಪ್ರಕರಣವನ್ನು ವಹಿಸಿದ್ದರು. ಅದರಂತೆ ಜಯಪ್ರಕಾಶ್ ಅವರಿಗೆ ಠಾಣೆಯಿಂದ ಹಿಂಬರಹ ನೀಡಿ, ದ್ವಿಚಕ್ರ ವಾಹನದ ಮಾಲಕರಿಗೆ ಮತ್ತು ಧಾರಾವಾಹಿಯ ನಿರ್ದೇಶಕರಿಗೆ ಮಾಹಿತಿ ಕೇಳಿ ನೋಟಿಸ್ ಜಾರಿಗೊಳಿಸಲಾಗಿತ್ತು. ಧಾರಾವಾಹಿಯ ದೃಶ್ಯವನ್ನು ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಿತ್ರೀಕರಿಸಿದ್ದು, ಮುಂದಿನ ವಿಚಾರಣೆಗೆ ಅಲ್ಲಿನ ಪೊಲೀಸ್ ಠಾಣೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಲಾಗಿತ್ತು. ಅರ್ಜಿಯ ಬಗ್ಗೆ ಪರಿಶೀಲನೆ ನಡೆಸಿದ ರಾಜಾಜಿನಗರ ಠಾಣಾ ಪೊಲೀಸರು ಸಂಬಂಧಪಟ್ಟ ನಟಿಗೆ ಮತ್ತು ಮಾಲಕಿಗೆ ಮೇ 10ರಂದು 500 ರೂ. ದಂಡ ವಿಧಿಸಿದ್ದಾರೆ. ಮಾತ್ರವಲ್ಲದೆ, ಇನ್ನು ಮುಂದೆ ತಮ್ಮ ಧಾರಾವಾಹಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂದು ಧಾರಾವಾಹಿಯ ಪ್ರೊಡಕ್ಷನ್ ಮ್ಯಾನೇಜರ್ ರಿಂದ ಹಿಂಬರಹ ಪಡೆದಿದ್ದಾರೆ.
ಧಾರಾವಾಹಿಯಲ್ಲಿ ಹೆಲ್ಮೆಟ್ ಇಲ್ಲದೆ ಸಂಚರಿಸುವ ದೃಶ್ಯವನ್ನು ನೋಡಿದೆ. ಇದರ ಪರಿಣಾಮದ ಕುರಿತು ಆಯುಕ್ತರಿಗೆ ದೂರು ನೀಡಿದೆ. ಪೊಲೀಸರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತದೆ ಅಂದುಕೊಂಡಿರಲಿಲ್ಲ. ಪೊಲೀಸರು ದಂಡ ವಿಧಿಸಿರುವುದು ಇತರರಿಗೂ ಪಾಠವಾಗಿದೆ, ಮಾತ್ರವಲ್ಲದೆ ಇದರಿಂದ ಜಾಗೃತಿಯೂ ಮೂಡಲಿದೆ.
– ಜಯಪ್ರಕಾಶ್ ಎಕ್ಕೂರು
You seem to have an Ad Blocker on.
To continue reading, please turn it off or whitelist Udayavani.