PETA; ಕಂಬಳಕ್ಕೆ ತಡೆ ಕೋರಿ ಅರ್ಜಿ: ಇಂದು ವಿಚಾರಣೆ
Team Udayavani, Oct 22, 2024, 6:15 AM IST
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ಮತ್ತು 26ರಂದು ಕಂಬಳ (ಕೋಣೆಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನಡೆಸಲಿದೆ.
ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪೆಟಾ ಪರ ಹಾಜರಾಗಿದ್ದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಕೋರಿದರು. ಇದನ್ನು ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿಗೊಳಿಸಿತು.
ನ್ಯಾಯಪೀಠವು ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ. ಇಷ್ಟು ವಿಳಂಬವೇಕೆ? ಎಂದು ಪ್ರಶ್ನಿಸಿದರು. ಆಗ ಧ್ಯಾನ್ ಚಿನ್ನಪ್ಪ ಅವರು ಜುಲೈನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ಈಗ ಅಕ್ಟೋಬರ್ 25 ಮತ್ತು 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಇದನ್ನು ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿಗೊಳಿಸಿತು.
ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕೆ ಅನುಮತಿಸದಂತೆ ಪೆಟಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.