ರೈತರ ಸಾಲ ಮನ್ನಾ ಮಾಡಲು ಮೋದಿ ಸರ್ಕಾರ ವಿಫಲ
Team Udayavani, Apr 28, 2018, 12:44 PM IST
ಪಿರಿಯಾಪಟ್ಟಣ: ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ರೈತರ ಸಾಲ ಮನ್ನಾ ಮಾಡಿ ಅವರ ನೆರವಿಗೆ ಬರುವಲ್ಲಿ ಕೇಂದ್ರದಲ್ಲಿನ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ವಾಗ್ಧಾಳಿ ನಡೆಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ಬಾರಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಾಲ ಮನ್ನಾಕ್ಕೆ ಮನವಿ ಮಾಡಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಕೇಂದ್ರ ಸರ್ಕಾರ ನಡೆಸುತ್ತಿರುವವರು ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ನೋಡಿ ಕಲಿಯಬೇಕು ಎಂದು ಟಾಂಗ್ ನೀಡಿದರು.
ವಿಫಲ: ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣವೇ ವಿದೇಶದಲ್ಲಿಟ್ಟಿರುವ ಕಪ್ಪು ಹಣ ತಂದು ಸಾಮಾನ್ಯರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆಂದು ಹೇಳಿ ನಾಲ್ಕು ವರ್ಷ ಕಳೆದರೂ ಯಾವ ಖಾತೆಗೂ ಒಂದು ರೂ. ಹಣ ಹಾಕಿಲ್ಲ. ಕೇಂದ್ರದ ಎನ್‌ಡಿಎ ಸರ್ಕಾರ ಸುಳ್ಳಿನ ಸರ್ಕಾರ ಎಂದು ಟೀಕಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರ ಬಂದಾಗಿನಿಂದ ರಾಜ್ಯದ 27 ಲಕ್ಷ ರೈತರಿಗೆ 8 ಸಾವಿರ ಕೋಟಿ ರೂ. ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಇಂದಿರಾ ಕ್ಯಾಂಟಿನ್ ಸ್ಥಾಪಿಸಿ 10 ರೂ.ಗೆ ಊಟ, 5 ರೂ.ಗೆ ತಿಂಡಿ ನೀಡಿ ಹಸಿವು ಮುಕ್ತ ಕರ್ನಾಟಕಕ್ಕೆ ಚಾಲನೆ ನೀಡಲಾಗಿದೆ.
ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪ್ರತಿಯೊಬ್ಬರಿಗೆ ತಿಂಗಳಿಗೆ 7 ಕೆ.ಜಿ ಅಕ್ಕಿ ನೀಡಿರುವುದಲ್ಲದೇ ಉಚಿತ ಆರೋಗ್ಯ ಭಾಗ್ಯ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮ ಜಾರಿಗೆ ತಂದು ನುಡಿದಂತೆ ನಡೆವ ಸರ್ಕಾರವಾಗಿದೆ. ಜೊತೆಗೆ ಬಸವಣ್ಣರ ತತ್ವಾದರ್ಶಗಳನ್ನು ಪಾಲಿಸಿದ ಸರ್ಕಾರ ನಮ್ಮದಾಗಿದೆ ಎಂದರು.
ಸಂವಿಧಾನ ರಕ್ಷಿಸಿ: ಲೋಕಸಭೆಯ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ದೇಶದ ಸಂವಿಧಾನ ರಕ್ಷಣೆಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದ ಅವರು, ಪ್ರಜಾಪ್ರಭುತ್ವ ರಕ್ಷಿಸಿದರೆ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ದೊರಕಿಸಲು ಅವಕಾಶವಿರುತ್ತದೆ. ಇದನ್ನು ತಡೆಯಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ಈಗಾಗಲೇ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಲು ವಿಫಲವಾಗಿದೆ. ಬಿಜೆಪಿಯನ್ನು ಬೆಂಬಲಿಸಿದರೆ ದೇಶದಲ್ಲಿ ನಮ್ಮ ಸಂವಿಧಾನಕ್ಕೆ ಧಕ್ಕೆಯಾಗಲಿದೆ ಎಂದು ಎಚ್ಚರಿಸಿದ ಅವರು, ಕಳೆದ ಐದು ವರ್ಷಗಳಿಂದ ಅಧಿಕಾರ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಭಾಗ್ಯಗಳನ್ನು ಜಾರಿಗೊಳಿಸುವ ಮೂಲಕ ಜನಪರ ಕೆಲಸ ಮಾಡುವುದರ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಕಳೆದ ಬಾರಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರ ಮಾಡಿದ ಸಂದರ್ಭದಲ್ಲಿ ನಾಲ್ಕು ಮುಖ್ಯಮಂತ್ರಿಗಳನ್ನು ಕಾಣಬೇಕಾಯಿತು. ಇವರೆಲ್ಲರೂ ಭ್ರಷ್ಟಾಚಾರದಿಂದ ಜೈಲಿಗೆ ಹೋಗಿರುವ ನಿದರ್ಶನಗಳಿವೆ. ಯಾವುದೇ ಭ್ರಷ್ಟಾಚಾರವಿಲ್ಲದೆ ಐದು ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾದ ಕೆ.ಸಿ.ವೇಣುಗೋಪಾಲ್, ಸಂಸದರಾದ ಧ್ರುವನಾರಾಯಣ್, ರಾಘವನ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ವಾಮಿನಾಥನ್ ಹಾಗೂ ಶಾಸಕರಾದ ವಾಸು, ಕೆ.ವೆಂಕಟೇಶ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮೈಸೂರು ಮಹಾನಗರ ಪಾಲಿಕೆ ಸದಸ್ಯ ಪ್ರಶಾಂತ್‌ಗೌಡ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸುನ್ ಚಂದ್ರು ಇತರರು ಭಾಗವಹಿಸಿದ್ದರು.
ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸಾಧನೆ ಶೂನ್ಯ. ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಒಂದೂ ಸೀಟನ್ನು ಬಿಜೆಪಿ ಗೆಲ್ಲುವುದಿಲ್ಲ. ಪಿರಿಯಾಪಟ್ಟಣದ ಕ್ಷೇತ್ರದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಲೇವಡಿ ಮಾಡಿದರು.
ಜೆಡಿಎಸ್ ಮತ್ತು ಬಿಜೆಪಿ ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದ ಮಾಡಿಕೊಂಡಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಇದನ್ನು ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬರಲು ಯಾವುದೇ ತತ್ವ ಮತ್ತು ಸಿದ್ಧಾಂತ ವಿಷಯದಲ್ಲಿ ರಾಜೀ ಮಾಡಿಕೊಳ್ಳಲು ಆ ಪಕ್ಷ ಸಿದ್ದವಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕೇವಲ 28 ಸೀಟು ಗೆಲ್ಲದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.