ಲಿಂಗಾಯತ ಹೋರಾಟದಲ್ಲಿ ಇದೀಗ “ದೆಹಲಿ’ ಬಿರುಕು
Team Udayavani, Nov 8, 2018, 6:00 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಈಗ ಲೋಕಸಭೆ ಚುನಾವಣೆ ಹತ್ತಿರ ಇರುವಾಗ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಕಂಡುಬರುತ್ತಿದೆ. ಆದರೆ, ಕಳೆದ ಬಾರಿ ಹೋರಾಟದ ಮುಂಚೂಣಿಯಲ್ಲಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅಂತರ ಕಾಯ್ದುಕೊಂಡಿರುವುದು ಕುತೂಹಲ ಮೂಡಿಸಿದೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮಾತೆ ಮಹಾದೇವಿ ನೇತೃತ್ವದಲ್ಲಿ ದೆಹಲಿಯಲ್ಲಿ ಲಿಂಗಾಯತ ಮಹಾರ್ಯಾಲಿ ನಡೆಸಲು ಸಿದ್ಧತೆ ನಡೆದಿದೆ. ಆದರೆ, ಎಂ.ಬಿ. ಪಾಟೀಲ್ ಈ ಹೋರಾಟದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ಸಚಿವಗಿರಿ ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಇದು ಮುಳ್ಳಾಗಬಹುದು ಮತ್ತು ಕಳೆದ ಬಾರಿ ಚುನಾವಣೆಯಲ್ಲಿ ಸರ್ಕಾರದ ಪತನದ ಕಾರಣಗಳಲ್ಲಿ ಈ ವಿಷಯವೂ ಒಂದಾಗಿದ್ದು, ವೈಯಕ್ತಿಕ ರಾಜಕೀಯ ಬೆಳವಣಿಗೆಗೂ ಇದು ಧಕ್ಕೆ ತಂದೊಡ್ಡುವ ಸಾಧ್ಯತೆಯನ್ನು ಅವರು ಮನಗಂಡಿರುವುದು ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದೆ.
ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ ರಾಜಕೀಯವಾಗಿ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸಿನ ಬಗ್ಗೆಯೂ ಯಾರೂ ಅಷ್ಟೊಂದು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಈಗ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನಕ್ಕೆ ಮುಂದಾಗಿದ್ದು, ಡಿಸೆಂಬರ್ 10,11, ಹಾಗೂ 12ರಂದು ಮೂರು ದಿನ ದೆಹಲಿಯಲ್ಲಿ ಬೃಹತ್ ಲಿಂಗಾಯತ ರ್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.
ಈ ರ್ಯಾಲಿಗೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಿಂದ ಸುಮಾರು 10 ಸಾವಿರ ಜನರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದಾರೆ. ಅಲ್ಲದೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಗುರುತಿಸಿಕೊಂಡಿರುವ ಭಾಲ್ಕಿ ಪಟ್ಟದ ದೇವರು, ಸಾಣೆಹಳ್ಳಿ ಶ್ರೀಗಳು, ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿಗಳಿಗೂ ಆಹ್ವಾನ ನೀಡಿದ್ದಾರೆ. ಈ ಕಾರ್ಯಕ್ರಮದ ಉದ್ಘಾಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ.
ಮಾತೆ ಮಹಾದೇವಿಯವರ ಈ ನಡೆ ಜಾಗತಿಕ ಲಿಂಗಾಯತ ಮಹಾಸಭೆ ನಾಯಕರ ಮುನಿಸಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮನವೊಲಿಸಿ ಬೇಡಿಕೆ ಈಡೇರಿಸುವ ಕೆಲಸವಾಗಬೇಕು. ಅದು ಬಿಟ್ಟು ಅರವಿಂದ್ ಕೇಜ್ರಿವಾಲ್ ಅವರನ್ನು ಕರೆದುಕೊಂಡು ಬಂದರೆ ಲಿಂಗಾಯತರ ಬೇಡಿಕೆಗೆ ಮತ್ತಷ್ಟು ಹಿನ್ನಡೆಯಾಗುತ್ತದೆ ಎಂಬ ಅಭಿಪ್ರಾಯ ಜಾಗತಿಕ ಲಿಂಗಾಯತ ಮಹಾಸಭೆ ಮುಖಂಡರದ್ದಾಗಿದೆ.
ಬಸವ ತತ್ವ ಅನುಸರಿಸುವ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಹುಟ್ಟಿಕೊಂಡಿತ್ತು. ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗಿತ್ತು. ಆದರೆ, ಈಗ ಮಾತೆ ಮಹಾದೇವಿ ಪ್ರತ್ಯೇಕವಾಗಿ ಬಸವ ಧರ್ಮ ಪೀಠದ ನೇತೃತ್ವದಲ್ಲಿ ಹೋರಾಟ ಮಾಡುತ್ತಿರುವುದರಿಂದ ಎಲ್ಲ ನಾಯಕರು ತಟಸ್ಥ ಧೋರಣೆ ಅನುಸರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಸವ ಧರ್ಮ ಪೀಠದ ವತಿಯಿಂದ ಮೂರು ದಿನ ಲಿಂಗಾಯತ ರ್ಯಾಲಿ ಮಾಡುತ್ತಿದ್ದೇವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ಘಾಟನೆ ಮಾಡಲಿದ್ದಾರೆ. ಸುಮಾರು 10 ಸಾವಿರ ಜನರು ಸೇರಲಿದ್ದಾರೆ.
– ಮಾತೆ ಮಹಾದೇವಿ, ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ.
ಬಸಣ್ಣನ ತತ್ವದಲ್ಲಿ ನಂಬಿಕೆ ಇಟ್ಟವರು ಎಲ್ಲರೂ ಸೇರಿ ಹೋಗಬೇಕು. ಮಾತೆ ಮಹಾದೇವಿ ಎಲ್ಲರನ್ನೂ ಕರೆದುಕೊಂಡು ಹೋಗುತ್ತಿಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕರೆಸುವುದರಿಂದ ನಮ್ಮ ಬೇಡಿಕೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.
– ಜಿ.ಬಿ. ಪಾಟೀಲ್, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ.
ಬಸವ ಮಂಟಪದ ಮಾತೆ ಮಹಾದೇವಿ ನೇತೃತ್ವದಲ್ಲಿ ಈ ರ್ಯಾಲಿ ನಡೆಯಲಿದೆ. ಜಾಗತಿಕ ಲಿಂಗಾಯತ ಮಹಾಸಭಾ ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರೂ ದೆಹಲಿಯಲ್ಲಿ ಅಧಿಕೃತ ಸಮಾವೇಶ ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆ. ನವೆಂಬರ್ 12 ರಂದು ಗದುಗಿನ ತೋಂಟದ ಸಿದ್ದಲಿಂಗ ಶ್ರೀಗಳ ಶ್ರದ್ದಾಂಜಲಿ ನಡೆಯಲಿದ್ದು, ಆ ಸಭೆಯಲ್ಲಿ ಪ್ರತ್ಯೇಕ ಧರ್ಮದ ಬೇಡಿಕೆಗೆ ಒತ್ತಡ ಹೇರಲಿದ್ದೇವೆ.
– ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠಾಧ್ಯಕ್ಷರು.
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.