ಸಹಸ್ರಾರು ರೈತರಿಂದ ಕೆಆರ್‌ಎಸ್ ಮುತ್ತಿಗೆ
ದರ್ಶನ್ ಪುಟ್ಟಣ್ಣಯ್ಯ ಸೇರಿ ರೈತ ಮುಖಂಡರ ಬಂಧನ • ಹೋರಾಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ಆಕ್ರೋಶ
Team Udayavani, Jun 29, 2019, 10:51 AM IST
ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣ: ಒಣಗುತ್ತಿರುವ ಬೆಳೆಗಳ ರಕ್ಷಣೆಗಾಗಿ ಕೆಆರ್‌ಎಸ್ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ಶುಕ್ರವಾರ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಆಗಮಿಸಿದ ರೈತ ಸಂಘದ ಕಾರ್ಯಕರ್ತರು ಕೆಆರ್‌ಎಸ್ ಪ್ರವೇಶ ದ್ವಾರದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಬೆಳೆಗಳ ರಕ್ಷಣೆಗೆ ನೀರು ಹರಿಸುವಂತೆ ಬೇಡಿಕೆ ಮುಂದಿಟ್ಟು ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಮನವಿಗೆ ಸ್ಪಂದಿಸದ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಹಸಿರು ಶಾಲು ಬೀಸಿ ಆಕ್ರೋಶ ವ್ಯಕ್ತಪಡಿಸಿದರು.
ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತ ಮುಖಂಡರು ಹಾಗೂ ಕಾರ್ಯಕರ್ತರ ಮನವೊಲಿಸುವ ಪ್ರಯತ್ನ ನಡೆಸಿದರೂ ಸಫಲವಾಗಲಿಲ್ಲ. ರಾಜ್ಯಸರ್ಕಾರದ ಆದೇಶವಿಲ್ಲದೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲವೆಂದು ಖಡಕ್ಕಾಗಿ ಅಧಿಕಾರಿಗಳು ತಿಳಿಸಿದ್ದರಿಂದ ರೊಚ್ಚಿಗೆದ್ದ ರೈತರು ಅಣೆಕಟ್ಟೆಯೊಳಗೆ ನುಗ್ಗಲು ಯತ್ನಿಸಿದರು. ಅಷ್ಟರಲ್ಲಿ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿ ಅಲ್ಲಿಂದ ಕರೆದೊಯ್ದರು.
ವಾರದಿಂದ ಅಹೋರಾತ್ರಿ ಧರಣಿ: ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದೊಂದು ವಾರದಿಂದ ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ರೈತಸಂಘದ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ರೈತರ ಮನವಿಗೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಿವಿಗೊಡದಿದ್ದರಿಂದ ರೊಚ್ಚಿಗೆದ್ದ ರೈತರು ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯವರೆಗೆ ನೀರು ಹರಿಸಲು ಗಡುವು ನೀಡಿ ನಂತರ ಕೆಆರ್‌ಎಸ್‌ಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಂಡಿದ್ದರು.
ಮಧ್ಯಾಹ್ನ 12 ಗಂಟೆಯಾದರೂ ಸರ್ಕಾರದಿಂದ ನೀರು ಬಿಡುವ ಆದೇಶ ಹೊರಬೀಳಲೇ ಇಲ್ಲ. ತಾಳ್ಮೆ ಕಳೆದುಕೊಂಡ ಪ್ರತಿಭಟನಾ ನಿರತ ನೂರಾರು ರೈತರು ಕೆಆರ್‌ಎಸ್‌ನತ್ತ ಬೈಕ್ ರ್ಯಾಲಿಯಲ್ಲಿ ಹೊರಟರು. ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನಿಂದಲೂ ಅಧಿಕ ಸಂಖ್ಯೆಯ ರೈತರು ಕೆಆರ್‌ಎಸ್‌ಗೆ ಬೈಕ್‌ನಲ್ಲಿ ಆಗಮಿಸಿದ್ದರು.
ಪೊಲೀಸ್ ಬಂದೋಬಸ್ತ್: ಕೆಆರ್‌ಎಸ್ ಮುತ್ತಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಣೆಕಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿತ್ತು. 6 ಡಿವೈಎಸ್ಪಿ, 1ಸಿಪಿಐ, 12 ಪಿಎಸ್‌ಐ, 5 ಜಿಲ್ಲಾ ಸಶಸ್ತ್ರ ಮೀಸಲು ಪಡೆ, 2 ಕೆಎಸ್‌ಆರ್‌ಪಿ ತುಕಡಿಗಳಲ್ಲದೆ 200 ಮಂದಿ ಪೊಲೀಸರನ್ನು ಭದ್ರತೆಗೆ ನೇಮಕ ಮಾಡಿತ್ತು.
ಕೆಆರ್‌ಎಸ್ ಪ್ರವೇಶ ದ್ವಾರದ ಉದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅದನ್ನು ಬೇಧಿಸಿ ಮುಂದೆ ಸಾಗದಂತೆ ಭದ್ರತೆ ಒದಗಿಸಿದ್ದರು. ಬೈಕ್‌ಗಳಲ್ಲಿ ಧಾವಿಸಿ ಬಂದ ರೈತ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಕೆಆರ್‌ಎಸ್ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದರು.
ಸ್ಥಳದಲ್ಲೇ ಪ್ರತಿಭಟನೆ, ಆಕ್ರೋಶ: ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸದೆ ರೈತರನ್ನು ದ್ವೇಷ ಮಾಡುತ್ತಿರುವ ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತರ ಸಂಕಷ್ಟಕ್ಕೆ ಸ್ಪಂದಿಸದ ರೈತ ವಿರೊಧಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನೀರು ಬಿಡಲಾಗುವುದಿಲ್ಲ: ಪ್ರತಿಭಟನಾ ನಿರತ ರೈತರನ್ನು ಪೊಲೀಸ್ ಅಧಿಕಾರಿಗಳು ಸಮಾಧಾನಪಡಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಸ್ಥಳಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳನ್ನು ಕರೆಸಿ ಸಮಜಾಯಿಷಿ ನೀಡಬೇಕು ಎಂದು ಬಿಗಿಪಟ್ಟು ಹಿಡಿದರು. ಅಧಿಕಾರಿಗಳು ಸ್ಪಷ್ಟ ನಿರ್ಧಾರ ಪ್ರಕಟಿಸುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ನೀರು ಬಿಡಲು ಸಾಧ್ಯವಿಲ್ಲ: ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಕೃಷ್ಣರಾಜಸಾಗರ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಕೃಷ್ಣ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ನೀರು ಬಿಡುವಂತೆ ಸರ್ಕಾರದಿಂದ ನಮಗೆ ಆದೇಶ ಬಂದಿಲ್ಲ. ಅಣೆಕಟ್ಟೆಯಲ್ಲಿ ಕಡಿಮೆ ನೀರು ಸಂಗ್ರಹವಾಗಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಆಗದು. ಇರುವ ನೀರನ್ನು ಕುಡಿಯುವ ನೀರಿಗೆ ಕಾಯ್ದಿರಿಸಲಾಗಿದೆ. ಬೆಳೆದುನಿಂತಿರುವ ಬೆಳೆಗಳಿಗೆ ನೀರು ಹರಿಸುವುದು ಕಷ್ಟದ ವಿಚಾರ. ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಂಡು ನಿರ್ದೇಶನ ನೀಡಿದರಷ್ಟೇ ನೀರು ಬಿಡಲು ಸಾಧ್ಯ ಎಂದು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಮೇಳಾಪುರ ಸ್ವಾಮಿಗೌಡ, ದೊಡ್ಡಪಾಳ್ಯ ಜಯರಾಂ, ಬಾಲಕೃಷ್ಣ, ಲತಾ ಶಂಕರ್, ಮರಳಗಾಲ ಕೃಷ್ಣೇಗೌಡ, ಪಿಎಸ್‌ಎಸ್‌ಕೆ ಮಾಜಿ ನಿರ್ದೇಶಕ ಪಾಂಡು ಸೇರಿದಂತೆ ಸಾವಿರಾರು ಸಂಖ್ಯೆಯ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.