ಇನ್ನೂ ನಡೆಯದ ಹಳೆ ಮನೆಗಳ ಸಮೀಕ್ಷೆ
•ಕಾರ್ಯರೂಪಕ್ಕೆ ಬಂದಿಲ್ಲ ಕುಮಾರಸ್ವಾಮಿ ಆದೇಶ •ನಿರಂತರ ಮಳೆಯಿಂದ ಮನೆ ಬಿದ್ದು ಜೀವಹಾನಿ
Team Udayavani, Aug 4, 2019, 1:16 PM IST
ಬೀದರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಸುಮಾರು 100 ವರ್ಷಕ್ಕೂ ಹೆಚ್ಚು ಹಳೆಯದಾದ ಮಣ್ಣಿನ ಮನೆಗಳು, ಶಿಥಿಲಾವಸ್ಥೆ ಮನೆಗಳ ಕುರಿತು ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಕಳುಹಿಸುವಂತೆ ನಿಕಟಪೂರ್ವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದು, ಇಂದಿಗೂ ಕೂಡ ಜಿಲ್ಲೆಯಲ್ಲಿನ ಹಳೆ ಮನೆಗಳ ಸರ್ವೇ ಕಾರ್ಯ ನಡೆದಿಲ್ಲ ಎಂದು ಗ್ರಾಮೀಣ ಭಾಗದ ಜನರು ಆರೋಪಿಸುತ್ತಿದ್ದಾರೆ.
ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿನ ಆಯಾ ಇಲಾಖೆಗಳ ಅಧಿಕಾರಿಗಳು ಸೂಕ್ತವಾಗಿ ತಮ್ಮ ಕರ್ತವ್ಯ ನಿರ್ವಹಿಸಿದರೆ ಇಂದು ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ವಾಡಿಯಲ್ಲಿ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವಿಗೀಡಾಗುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಜನರಿಂದ ವ್ಯಕ್ತವಾಗುತ್ತಿವೆ. ಒಂದು ವಾರದಿಂದ ಜಿಲ್ಲೆಯ ವಿವಿಧೆಡೆ ನಿರಂತರ ಮಳೆಯಾಗುತ್ತಿದ್ದು, ಮಣ್ಣಿನ ಗೋಡೆಗಳು ನೆನೆದು ಬೀಳುವ ಹಂತಕ್ಕೆ ಬರುತ್ತಿವೆ. ಆದರೆ, ಅಧಿಕಾರಿಗಳು ಮಾತ್ರ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗುತ್ತಿಲ್ಲ ಎಂದು ಗ್ರಾಮೀಣ ಭಾಗದ ಜನರು ಹೇಳುತ್ತಿದ್ದಾರೆ.
ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಜೂನ್ ತಿಂಗಳಲ್ಲಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಗಳ ಮನೆಗೆ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ 24 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ಬೀದರ ಜಿಲ್ಲೆಯ ವಿವಿಧೆಡೆ ಮಣ್ಣಿನ ಮನೆಗಳ ಕುರಿತು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಇಂದಿಗೂ ಕೂಡ ಮಣ್ಣಿನ ಮನೆಗಳ ಕುರಿತು ಸರ್ವೇ ಕಾರ್ಯ ನಡೆದಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಅಲ್ಲದೆ, ವಿವಿಧ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. 2,500 ಮನೆಗಳ ನಿರ್ಮಾಣಕ್ಕೆ ಆದೇಶ ನೀಡಿದ್ದು, ಸದ್ಯ ಮಣ್ಣಿನ ಮನೆಯಲ್ಲಿ ವಾಸ ಇರುವ ಕುಟುಂಬಸ್ಥರನ್ನು ಗುರುತಿಸಿ, ಮನೆಯ ಮಾಲೀಕರ ಹೆಸರಲ್ಲಿ ನಿವೇಶ ಇದ್ದರೆ ಕೂಡಲೆ ಮನೆ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು. ಮುಖ್ಯಮಂತ್ರಿಗಳ ಆದೇಶಕ್ಕೆ ಅಧಿಕಾರಿಗಳು ಬೆಲೆ ನೀಡದಿದ್ದರೆ ಏನು ಗತಿ? ಎಂಬ ಮಾತುಗಳು ಕೇಳಿಬರುತ್ತಿವೆ.
ಸದ್ಯ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಣ್ಣಿನ ಹಳೆ ಮನೆಗಳು ಇವೆ. ನಿರಂತರ ಮಳೆಯಿಂದ ನೆನೆದು ಯಾವ ಸಂದರ್ಭದಲ್ಲಿ ಬೇಕಾದರೂ ಕುಸಿಯಬಹುದಾಗಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲಗೊಂಡ ಮನೆಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಾಣ ಹಾನಿ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಾಗಿದೆ.
•ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.