“ಮುಂಗಾರು ವಿಕೋಪ ತಡೆಗೆ ಮುಂಜಾಗ್ರತೆ ವಹಿಸಿ’
ಮುಂಗಾರು ಮಳೆ ವಿಪತ್ತು ನಿರ್ವಹಣೆ: ಅಪರ ಜಿಲ್ಲಾಧಿಕಾರಿ ಸಭೆ
Team Udayavani, May 25, 2020, 10:12 AM IST
ಮಳೆ ವಿಪತ್ತು ನಿರ್ವಹಣೆ ಕುರಿತು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಜತೆ ಸಭೆ ನಡೆಸಿದರು.
ಉಡುಪಿ: ಜಿಲ್ಲಾಯಲ್ಲಿ ಪ್ರಸಕ್ತ ಮುಂಗಾರು ಮಳೆಯ ಸಮಯದಲ್ಲಿ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ, ಆಸ್ತಿಹಾನಿ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳು ವಂತೆ ಮತ್ತು ವಿಕೋಪ ಸಂಭವಿಸಿದ ಸಮಯದಲ್ಲಿ ಸಾರ್ವಜನಿಕರ ರಕ್ಷಣೆಗೆ ತುರ್ತಾಗಿ ಸ್ಪಂದಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಸೂಚಿಸಿದ್ದಾರೆ. ಮುಂಗಾರು ಮಳೆ ವಿಪತ್ತು ನಿರ್ವಹಣೆ ಸಂದರ್ಭವನ್ನು ಸಮರ್ಥವಾಗಿ ನಿಭಾ ಯಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮರ ಕತ್ತರಿಸುವ ಯಂತ್ರ
ಪ್ರಾಕೃತಿಕ ವಿಕೋಪ ನಿಧಿಯಿಂದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಮರ ಕತ್ತರಿಸುವ ಯಂತ್ರಗಳನ್ನು ಒದಗಿಸ ಲಾಗುವುದು ಎಂದು ಅವರು ಹೇಳಿದರು. ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ತಮ್ಮ ತಾ| ವ್ಯಾಪ್ತಿಯ ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಕೂಡಲೇ ಸಭೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮತ್ತು ಸ್ಥಳೀಯ ನುರಿತ ಈಜುಗಾರರು, ಮುಳುಗು ತಜ್ಞರ ಪಟ್ಟಿಯನ್ನು ಸರಿಯಾದ ಮೊಬೈಲ್ ಸಂಖ್ಯೆಯೊಂದಿಗೆ ಸಿದ್ಧವಾಗಿಟ್ಟು ಕೊಂಡು, ತುರ್ತು ಸಂದರ್ಭಗಳಿಗಾಗಿ ಬೋಟುಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಹಾಗೂ ವಿಕೋಪ ಸಂದರ್ಭದಲ್ಲಿ ಹಾನಿಯಾದ ಪ್ರದೇಶಗಳಿಗೆ ತತ್‌ಕ್ಷಣ ಭೇಟಿ ನೀಡಿ, ನಷ್ಟದ ವರದಿ ಸಿದ್ಧಪಡಿಸಿ, ಸಂತ್ರಸ್ತರಿಗೆ ನಿಗದಿತ ಅವಧಿಯೊಳಗೆ ಆದಷ್ಟು ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಡಲ ಕೊರೆತ
ಕಡಲ ಕೊರೆತ ಸಂಭವಿಸುವ ಪ್ರದೇಶ ಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಈ ಕುರಿತಂತೆ ನಡೆಯುತ್ತಿರುವ ಕಾಮಗಾರಿಗಳ ಕುರಿತು ಎಡಿಬಿ ಮತ್ತು ಬಂದರು ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಅತ್ಯಗತ್ಯವಾದ ಕ್ರಮ ಕೈಗೊಂಡು ಸಮಸ್ಯೆಗಳು ಬಾರದಂತೆ ಎಚ್ಚರವಹಿಸಿಬೇಕು ಹಾಗೂ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಿರುವ ಹಲಗೆಗಳನ್ನು ತೆಗೆಯುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಲ್ಲುಕೋರೆ
ಜಿಲ್ಲೆಯಲ್ಲಿನ ಸ್ಥಗಿತಗೊಂಡಿರುವ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕಲ್ಲುಕೋರೆಗಳಿಗೆ ಸೂಕ್ತ ತಡೆ ಬೇಲಿ ಹಾಕಿ, ಸೂಚನಾ ಫಲಕ ಹಾಕಿರುವ ಕುರಿತಂತೆ ಪರಿಶೀಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕೋರೆಗಳ ಲೈಸೆನ್ಸ್ ರದ್ದುಗೊಳಿಸಿ, ಮಾಲಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು.
ಮಳೆ: ಹಾನಿ
ಕಳೆದ ವರ್ಷ ಜಿಲ್ಲೆಯ ವಾಡಿಕೆ ಮಳೆ 4,039 ಮಿ.ಮೀ. ಆಗಿದ್ದು, 4,637 ಮಿ.ಮೀ ಮಳೆ ಆಗಿದೆ, ಈ ವರ್ಷ ಇಂದಿನವರೆಗೆ 57.8 ಮಿ.ಮೀ. ಮಳೆ ಆಗಿದ್ದು, 37 ವಿವಿಧ ಹಾನಿ ಪ್ರಕರಣಗಳಲ್ಲಿ 11.32 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
“ಚರಂಡಿಗಳ ಹೂಳು ತೆಗೆಯಲು ಕ್ರಮ ಕೈಗೊಳ್ಳಿ’
ಉಡುಪಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಸ್ಥಳಿಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಚರಂಡಿಗಳಲ್ಲಿನ ಹೂಳು ತೆಗೆದು, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ತಮ್ಮ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ಕುರಿತು ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ನೋಡಲ್ ಅಧಿಕಾರಿ ನೇಮಕ
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸುವ ಕುರಿತಂತೆ ಎಲ್ಲ ಹೋಬಳಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಹಾಗೂ ಗ್ರಾಮ ಮಟ್ಟದಲ್ಲಿ ಸಹ ತುರ್ತು ಕಾರ್ಯಪಡೆ ರಚಿಸಲಾಗುವುದು ಎಂದು ಎಡಿಸಿ ತಿಳಿಸಿದರು. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.