ಬಸ್‌ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು
ಬಸ್ ಮಾಲಕರ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ
Team Udayavani, Jun 12, 2020, 5:11 AM IST
ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್‌ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಖಾಸಗಿ ಬಸ್ ಮಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್‌ಗಳ ವಿರುದ್ಧ ಸಾರಿಗೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದೆ. ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಈ ಕುರಿತಂತೆ ಸರಕಾರ ನೀಡಿರುವ ಆದೇಶ ಕಟ್ಟುನಿಟ್ಟಾಗಿ ಪಾಲಿಸುವಂತೆ ಬಸ್ ಮಾಲಕರಿಗೆ ತಿಳಿಸಿದರು.
ಎಲ್ಲ ಬಸ್‌ಗಳಲ್ಲಿ 30ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸದಂತೆ ತಿಳಿಸಿದ ಅವರು, ಸಾರಿಗೆ ಇಲಾಖೆ ಅಧಿಕಾರಿಗಳು ಇದರ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಬಸ್‌ಗಳಲ್ಲಿ ಪ್ರಯಾಣಿಕರಿಗೆ ಸ್ಯಾನಿಟೈಸರ್ ನೀಡುವಂತೆ ಹಾಗೂ ಮಾಸ್ಕ್ ಇಲ್ಲದ ಪ್ರಯಾಣಿಕರಿಗೆ ಬಸ್‌ನೊಳಗೆ ಪ್ರವೇಶ ನೀಡದಂತೆ ಬಸ್ ಮಾಲಕರಿಗೆ ತಿಳಿಸಿ, ಈ ಬಗ್ಗೆ ತಮ್ಮ ಸಿಬಂದಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು.
ಜನದಟ್ಟಣೆ ಹೆಚ್ಚಿರುವ ಸಮಯದಲ್ಲಿ ಮಾತ್ರ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಜಾಸ್ತಿಯಿದ್ದು, ಉಳಿದಂತೆ ಇತರ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಆದ್ದರಿಂದ ಜನದಟ್ಟಣೆ ಸಮಯದಲ್ಲಿ ಸಾಮಾಜಿಕ ಅಂತರ ಪಾಲನೆ ಕಷ್ಟ ಎಂದು ಬಸ್ ಮಾಲಕರು ತಿಳಿಸಿದರು. ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ. ಜನದಟ್ಟಣೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಓಡಿಸಿ ಅಥವಾ ನಿಮ್ಮ ಹಂತದಲ್ಲೇ ಟೈಮಿಂಗ್ ಬದಲಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬಸ್ ಮಾಲಕರ ಬೇಡಿಕೆ
ಬಸ್ ದರದ ಹೆಚ್ಚಳ ಯಾವ ಆದೇಶದಲ್ಲಿ ಮಾಡಿದ್ದೀರಿ ಎಂಬ ಜಿಲ್ಲಾಧಿಕಾರಿಗಳ ಪ್ರಶ್ನೆಗೆ,ಕೋವಿಡ್ -19ದಿಂದ ಬಸ್ ದರ ಹೆಚ್ಚಳ ಮಾಡಿಲ್ಲ, ಬಸ್ ದರ ಹೆಚ್ಚಳ ಕುರಿತಂತೆ ಜನವರಿಯಲ್ಲಿಯೇ ಸರಕಾರ ಒಪ್ಪಿಗೆ ಸೂಚಿಸಿದ್ದು ಈಗಾಗಲೇ ಕೆಎಸ್‌ಆರ್‌ಟಿಸಿಯಲ್ಲಿ ಹೆಚ್ಚಳವಾಗಿದೆ. ಖಾಸಗಿ
ಬಸ್‌ಗಳಿಗೆ ಈಗ ಆದೇಶ ಬಂದ ಅನಂತರ ರಾಜ್ಯಾದ್ಯಂತ ಹೆಚ್ಚಳ ಮಾಡಲಾಗಿದೆ. ಬಸ್‌ಗಳಲ್ಲಿ 30 ಜನ ಪ್ರಯಾಣಿಕರನ್ನು ಕರೆದುಕೊಂಡು ಹೋದರೂ ಉಳಿದ ಖಾಲಿ ಸೀಟುಗಳಿಗೆ ತೆರಿಗೆ ಪಾವತಿಸಬೇಕಿದೆ, ಪ್ರಯಾಣಿಕರ ಸಂಖ್ಯೆಗೆ ಮಾತ್ರವೇ ತೆರಿಗೆ ಪಾವತಿ ಮಾಡುವ ಕುರಿತಂತೆ ಅವಕಾಶ ನೀಡಬೇಕು ಎಂದು ಬಸ್ ಮಾಲಕರು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು.
ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ಕಾರ್ಯದರ್ಶಿ ಸದಾನಂದ ಚಾತ್ರ, ಉಡುಪಿ ಸರ್ವಿಸ್ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಕರಾವಳಿ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಿರ್ವ ಬಸ್ ಮಾಲಕರ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.