ಅನಾಹುತ ಆಗದಂತೆ ಎಚ್ಚರ ವಹಿಸಿ
Team Udayavani, Jun 5, 2018, 11:51 AM IST
ಬೆಂಗಳೂರು: ಮಳೆಗಾಲದಲ್ಲಿ ನಗರದಲ್ಲಿ ಯಾವುದೇ ಪ್ರಾಣ ಹಾನಿ, ಆಸ್ತಿಪಾಸ್ತಿ ನಷ್ಟ, ಅನಾಹುತ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಸ್ತೆ ಗುಂಡಿಗಳನ್ನು ಸಮರೋಪಾದಿಯಲ್ಲಿ ಮುಚ್ಚುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈಗಾಗಲೇ ಧಾರಾಕಾರ ಮಳೆ ಸುರಿಯಲಾರಂಭಿಸಿದೆ. ಭಾರಿ ಮಳೆ, ಗಾಳಿಯಿಂದಾಗಿ ಅನಾಹುತ ಉಂಟಾಗದಂತೆ ಜನರಲ್ಲಿ ವಿಶ್ವಾಸ ಮೂಡಿಸಬೇಕಾದ ಅಗತ್ಯವಿದೆ. ಮಳೆ ಸುರಿದಾಗ ಪ್ರಾಣ ಹಾನಿ, ಆಸ್ತಿಪಾಸ್ತಿಗೆ ನಷ್ಟವಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಯಾವುದೇ ಕಾರಣಕ್ಕೂ ಜನ ಜೀವನ ಅಸ್ತವ್ಯಸ್ತವಾಗದಂತೆ ಎಚ್ಚರ ವಹಿಸಬೇಕು. ಚರಂಡಿ, ಮಳೆ ನೀರು ಕಾಲುವೆಗಳಲ್ಲಿ ನೀರು ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಸೃಷ್ಟಿಯಾಗಿರುವ ಗುಂಡಿಗಳನ್ನು ಮುಚ್ಚಿ ಹೊಸದಾಗಿ ಗುಂಡಿಗಳು ಸೃಷ್ಟಿಯಾಗದಂತೆ ಕ್ರಮ ವಹಿಸಬೇಕು. ಸಂಚಾರ ದಟ್ಟಣೆ ಉಂಟಾಗದಂತೆಯೂ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ, ಆತಂಕ ವ್ಯಕ್ತವಾಗುತ್ತಿದೆ. ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಬಗ್ಗೆಯೂ ಶೀಘ್ರವಾಗಿ ಗಮನ ಹರಿಸಬೇಕು ಎಂದು ತಿಳಿಸಿದರು.
ಇದಕ್ಕೆ ಸಭೆಯಲ್ಲಿದ್ದ ಪಾಲಿಕೆ ಹಿರಿಯ ಅಧಿಕಾರಿಗಳು, ಈಗಾಗಲೇ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಭಾರಿ ಮಳೆಯಾಗುವ ಮೊದಲೇ ಸಮರೋಪಾದಿಯಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಭರವಸೆ ನೀಡಿದರು.
30 ಕಡೆ ಪರಿಹಾರ ಕ್ರಮ ಬಾಕಿ: ಸಭೆ ಬಳಿಕ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್, ಮಳೆಗಾಲದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅದರಂತೆ ತ್ವರಿತವಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.
ನಗರದಲ್ಲಿ ಪ್ರವಾಹ, ಅವಘಡ ಸಂಭವಿಸಬಹುದಾದ 369 ಸ್ಥಳಗಳನ್ನು ಗುರುತಿಸಲಾಗಿತ್ತು. ಈ ಪೈಕಿ 339 ಕಡೆ ಪರಿಹಾರ ಕ್ರಮ ಕೈಗೊಳ್ಳಲಾಗಿದೆ. ಬಾಕಿಯಿರುವ 30 ಸ್ಥಳಗಳಲ್ಲಿ ಶೀಘ್ರವಾಗಿ ಅಪಾಯ ತಡೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಮಳೆ ಸುರಿದಾಗ ಚರಂಡಿ, ಕಾಲುವೆಗಳಲ್ಲಿ ಪ್ರವಾಹ ಉಂಟಾಗದಂತೆ, ಸಂಚಾರ ದಟ್ಟಣೆ ಉಂಟಾಗಿ ಜನ ತೊಂದರೆ ಅನುಭವಿಸದಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯ ಕಾಪಾಡುವ ಜತೆಗೆ ಕಾಲುವೆ ಒತ್ತುವರಿ ತೆರವುಗೊಳಿಸುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
5 ಸಾವಿರಕ್ಕೂ ಹೆಚ್ಚು ಗುಂಡಿ ಪತ್ತೆ: ನಗರದಲ್ಲಿ ಈವರೆಗೆ 5,800 ರಸ್ತೆ ಗುಂಡಿ ಪತ್ತೆಯಾಗಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಸ್ತೆ ಗುಂಡಿಗಳನ್ನು ಸಮರೋಪಾದಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 600 ಕಿ.ಮೀ. ಉದ್ದದ ರಸ್ತೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರರ ನಿರ್ವಹಣಾ ಅವಧಿ ಬಾಕಿಯಿದ್ದು, ಆ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರೇ ಮುಚ್ಚಲಿದ್ದಾರೆ. ಪಾಲಿಕೆ ಅದಕ್ಕೆ ಹಣ ವೆಚ್ಚ ಮಾಡುವುದಿಲ್ಲ ಎಂದು ಹೇಳಿದರು.
ಪರಹಾರ ಕಾರ್ಯಕ್ಕೆ ತಂಡಗಳು ಸಜ್ಜು: ಜೂ.6, 7ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಮಾಹಿತಿ ಇದೆ. ಅದರಂತೆ ನಗರದಾದ್ಯಂತ 63 ನಿಯಂತ್ರಣ ಕೊಠಡಿಗಳಿದ್ದು, ಇವು ನಿರಂತರವಾಗಿ ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಸಂಪರ್ಕದಲ್ಲಿರಲಿವೆ. ಯಾವುದೇ ಪರಿಸ್ಥಿತಿ ಎದುರಿಸಲು ಪರಿಹಾರ ತಂಡಗಳು ಸನ್ನದ್ಧ ಸ್ಥಿತಿಯಲ್ಲಿರಲಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಹಾಗೂ ತುರ್ತು ಪರಿಹಾರ ತಂಡಗಳು ಕೂಡ ಸೇವೆಗೆ ಲಭ್ಯವಿರಲಿವೆ ಎಂದು ತಿಳಿಸಿದರು. ಮಳೆಗಾಲದ ಅನಾಹುತ ತಡೆ, ಪರಿಹಾರ ಕಾರ್ಯಕ್ಕೆ ಅನುದಾನ ಅಗತ್ಯವಿದ್ದರೆ ಈ ಸಂಬಂಧ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.