ಚುನಾವಣೆ ವೇಳೆ ಪಕ್ಷಾಂತರ ತಡೆಯಲು ಬಿಜೆಪಿ ತಂತ್ರ
Team Udayavani, Nov 30, 2017, 6:10 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಟಿಕೆಟ್ ಕೈತಪ್ಪಿದವರು ಪಕ್ಷಾಂತರ ಮಾಡುವುದರಿಂದ ಆಗುವ ಹಾನಿ ತಪ್ಪಿಸಿಕೊಳ್ಳಲು ಬಿಜೆಪಿ ಕಾರ್ಯತಂತ್ರವೊಂದನ್ನು ಸಿದ್ಧಪಡಿಸುತ್ತಿದ್ದು, ಟಿಕೆಟ್ ಕೈತಪ್ಪಿದರೂ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದವರಿಗೆ “ಸೂಕ್ತ ಸ್ಥಾನಮಾನ’ದ ಭರವಸೆ ನೀಡಲು ಮುಂದಾಗಿದೆ.
ರಾಜ್ಯದಲ್ಲಿ ಮತ್ತೆ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿ, ಬಹುಮತದೊಂದಿಗೆ ಆಡಳಿತಕ್ಕೆ ಬಂದರೆ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳಿಗೆ ನಿಗಮ-ಮಂಡಳಿ ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಪ್ರಮುಖ ಹುದ್ದೆಗಳನ್ನು ನೀಡಲು ತೀರ್ಮಾನಿಸಿದೆ. ಈ ಕುರಿತು ಆಕಾಂಕ್ಷಿಗಳಿಗೂ ಸಂದೇಶ ರವಾನಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಇದೇ ರೀತಿಯ ತಂತ್ರ ಅನುಸರಿಸಿತ್ತು. ಟಿಕೆಟ್ ಕೈತಪ್ಪಿದವರಿಗೆ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರದ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿತ್ತು. ಇದರ ಪರಿಣಾಮ ಪಕ್ಷಾಂತರ ಪ್ರಮಾಣ ತೀರಾ ಕಡಿಮೆಯಾಗಿತ್ತು. ಅಲ್ಲದೆ, ಅಧಿಕಾರಕ್ಕೆ ಬಂದ ಮೂರು ರಾಜ್ಯಗಳಲ್ಲಿ ಹೇಳಿದಂತೆ ನಡೆದುಕೊಂಡಿತ್ತು. ಈ ಮಾದರಿಯನ್ನು ಗುಜರಾತ್ ಚುನಾವಣೆಯಲ್ಲೂ ಅನುಸರಿಸುತ್ತಿದ್ದು, ಕರ್ನಾಟಕಕ್ಕೂ ಅನ್ವಯ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಆದರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಪ್ರತಿಪಕ್ಷಗಳ ಅಭ್ಯರ್ಥಿಗಳು ಮತ್ತು ಬಿಜೆಪಿ ಮಧ್ಯೆ ಇರುತ್ತದೆ. ಯಾರೇ ಅಭ್ಯರ್ಥಿಯಾದರೂ ಉಳಿದ ಆಕಾಂಕ್ಷಿಗಳೆಲ್ಲರೂ ಪಕ್ಷದ ಗೆಲುವಿಗೆ ಕೆಲಸ ಮಾಡಬೇಕು.
ಇದರಿಂದ ಪಕ್ಷ ಅಧಿಕಾರಕ್ಕೆ ಬಂದರೆ ಯಾರ್ಯಾರು ಎಷ್ಟೆಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಪರಿಗಣಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂಬ ಸಂದೇಶವನ್ನು ಆಕಾಂಕ್ಷಿಗಳಿಗೆ ಕಳುಹಿಸಿದೆ ಎಂದು ತಿಳಿದುಬಂದಿದೆ.
ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂದು ಮಿಷನ್-150 + ಘೋಷಣೆಯೊಂದಿಗೆ ಬಿಜೆಪಿ ಹೊರಟಿದೆಯಾದರೂ ಇತ್ತೀಚೆಗೆ ನಡೆಸಿದ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ 110ರಿಂದ 120 ಸೀಟುಗಳು ಮಾತ್ರ ಬರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಇದರ ಮಧ್ಯೆ ಬಿಜೆಪಿಯ ಪ್ರಬಲ ಕೋಟೆಯಾಗಿರುವ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನಿರೀಕ್ಷೆಗಿಂತ ಹೆಚ್ಚು ಕ್ರಿಯಾಶೀಲವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪಕ್ಷಾಂತರದ ಸಮಸ್ಯೆ ಉದ್ಭವವಾದರೆ ಅಧಿಕಾರಕ್ಕೆ ಬರುವುದು ಕಷ್ಟವಾಗಬಹುದು. ಅದಕ್ಕಾಗಿ ಟಿಕೆಟ್ ಹಂಚಿಕೆಗೆ ಮುನ್ನವೇ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಬಿಜೆಪಿ ಈ ತಂತ್ರಗಾರಿಕೆ ರೂಪಿಸಿದೆ ಎನ್ನಲಾಗಿದೆ.
ಯುವಕರಿಗೂ ಭರವಸೆ:
ಈ ಮಧ್ಯೆ ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಕೇಳುತ್ತಿದ್ದು, ಇದು ಕೂಡ ಗೆಲ್ಲುವ ಅಭ್ಯರ್ಥಿಗಳಿಗೇ ಮಣೆ ಹಾಕಲು ಮುಂದಾಗಿರುವ ಪಕ್ಷಕ್ಕೆ ಸ್ವಲ್ಪ ಮಟ್ಟಿನ ಆತಂಕ ಉಂಟುಮಾಡಿದೆ. ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನಡೆಸಿದ ಸಮೀಕ್ಷೆಗಳಲ್ಲಿ ಹಾಲಿ ಮತ್ತು ಈ ಹಿಂದೆ ಶಾಸಕರಾಗಿದ್ದವರ ಬಗ್ಗೆಯೇ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ಯುವಕರನ್ನು ಸಮಾಧಾನಪಡಿಸಲು ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಲಾಗಿದೆ.
ಇದುವರೆಗೆ ಪಕ್ಷಕ್ಕಾಗಿ ಸಾಕಷ್ಟು ದುಡಿದರೂ ಪಕ್ಷದಲ್ಲಿ ಜವಾಬ್ದಾರಿ ಹೊಂದಿಲ್ಲದ ಕಾರಣ ಜನರೊಂಂದಿಗೆ ಗುರುತಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಅಂಥವರಿಗೆ ಪಕ್ಷದಲ್ಲಿ ಜವಾಬ್ದಾರಿಗಳನ್ನು ನೀಡಿ ಎರಡನೇ ಹಂತದ ಮುಖಂಡರಾಗಿ ಗುರುತಿಸಿಕೊಳ್ಳಲು ಅವಕಾಶ ನೀಡಲಾಗುವುದು. ಆ ಮೂಲಕ ಭವಿಷ್ಯದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಧಾನಪಡಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿರುವುದಾಗಿ ತಿಳಿದುಬಂದಿದೆ.
ಪಕ್ಷಕ್ಕೆ ಬರುವವರ ಪಟ್ಟಿ ನೀಡಲು ಸೂಚನೆ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಕೆಲವು ಹಾಲಿ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಂಥವರ ಪಟ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಘಟಕಕ್ಕೆ ಸೂಚನೆ ನೀಡಿದ್ದಾರೆ.
ಅನ್ಯ ಪಕ್ಷಗಳಿಂದ ಹಾಲಿ ಶಾಸಕರು ಪಕ್ಷ ಸೇರ್ಪಡೆಯಾದರೆ ಅವರಿಗೆ ಟಿಕೆಟ್ ನೀಡುವುದು ಅನಿವಾರ್ಯ. ಇಂತಹ ಸಂದರ್ಭದಲ್ಲಿ ಆ ಕ್ಷೇತ್ರಗಳಲ್ಲಿ ಪಕ್ಷದ ಇತರೆ ಟಿಕೆಟ್ ಆಕಾಂಕ್ಷಿಗಳು ಅಸಮಾಧಾನಗೊಳ್ಳುತ್ತಾರೆ. ಬೇರೆ ಪಕ್ಷ ಸೇರಿ ಅಲ್ಲಿಂದ ಟಿಕೆಟ್ ಪಡೆಯುವ ಸಾಧ್ಯತೆಯೂ ಇದೆ. ಹೀಗಾಗಿ ಅಂಥವರನ್ನು ಸಮಾಧಾನಪಡಿಸುವ ವೇದಿಕೆ ಸೃಷ್ಟಿಸಲು ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬರುವ ಹಾಲಿ ಶಾಸಕರ ಪಟ್ಟಿ ನೀಡುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.
– ಪ್ರದೀಪ್ ಕುಮಾರ್ ಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.