Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ
Team Udayavani, Oct 17, 2024, 10:50 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕೆಲವು ಅಪಾರ್ಟ್ ಮೆಂಟ್ ಮತ್ತು ಲೇಔಟ್‌ಗಳಲ್ಲಿ ನೀರು ನುಗ್ಗಿರುವುದಕ್ಕೆ ರಾಜಕಾಲುವೆ ಒತ್ತುವರಿ ಕಾರಣವಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ದೂರಿದರು.
ನಗರದಲ್ಲಿ ಮಳೆಪೀಡಿತ ಪ್ರದೇಶಗಳಾದ ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಸೇರಿದಂತೆ ಮತ್ತಿತರರ ಪ್ರದೇಶಗಳಿಗೆ ಬುಧವಾರ ಅವರು ಭೇಟಿ ನೀಡಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ರಾಜಕಾಲುವೆ ಒತ್ತುವರಿ ಮಾಡಿ ಅಪಾರ್ಟ್‌ಮೆಂಟ್, ಲೇಔಟ್ ನಿರ್ಮಾಣ ಮಾಡಿರುವುದು ಇದಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಈಗಾಗಲೇ ಹಲವು ಕಡೆಗಳಲ್ಲಿ ಪಾಲಿಕೆ ಅಧಿಕಾರಿಗಳು ರಾಜಕಾಲುವೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ತೆರವು ಕಾರ್ಯಾಚರಣೆ ಆಗಿರುವ ಪ್ರದೇಶದಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ. ಆದರೆ ಕೆಲವು ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ಪ್ರಕರಣಗಳು ಕೋರ್ಟ್ ನಲ್ಲಿವೆ. ಅಂತಹ ಕಡೆಗಳಲ್ಲಿ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದರು.
ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಸಮಸ್ಯೆಗಳನ್ನು ಪರಿಶೀಲಿಸಿದ ಆಯುಕ್ತರು, ಮಾನ್ಯತಾ ಟೆಕ್ ಪಾಕ್ ವ್ಯಾಪ್ತಿಯಲ್ಲಿ ಕೂಡ ರಾಜಕಾಲುವೆ ಒತ್ತುವರಿಯಾಗಿದೆ. ಈ ಬಗ್ಗೆ ಪಾಲಿಕೆ ಕಂದಾಯ ಅಧಿಕಾರಿಗಳು ಕೂಡ ಮಾಹಿತಿ ನೀಡಲಾಗಿದೆ. ಕೆಲವು ಸಂಸ್ಥೆಗಳು ಈ ಬಗ್ಗೆ ನ್ಯಾಯಾಲಯ ಮೆಟ್ಟಿಲೇರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಆದರೂ ಕೂಡ ಪಾಲಿಕೆ ಅಧಿಕಾರಿಗಳು ನೀರು ತೆರವು ಕಾರ್ಯದಲ್ಲಿ ತೊಡಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಮಳೆಯಿಂದ ಆಗಿರುವ ಅನಾಹುತಗಳ ತಡೆಗೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.