ನಗರದಲ್ಲಿ ಮತ್ತೆ ಫ್ಲೆಕ್ಸ್ ಹಾವಳಿ
Team Udayavani, Jan 26, 2019, 4:55 AM IST
ಬೆಂಗಳೂರು: ನ್ಯಾಯಾಲಯದ ನಿರ್ದೇಶನವಿದ್ದರೂ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಹಾವಳಿ ಮತ್ತೆ ತಲೆ ಎತ್ತುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಕೋರಿ ಸಮಾಜ ಸೇವಕ ಮಾಯ್ಗೇಗೌಡ ಮತ್ತಿತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಶುಕ್ರವಾರ ಹಂಗಾಮಿ ಮುಖ್ಯ ನ್ಯಾ. ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಎಸ್. ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ನಗರದಲ್ಲಿ ಫ್ಲೆಕ್ಸ್ ಹಾವಳಿ ಮತ್ತೆ ಆರಂಭಗೊಂಡಿದೆ. ಎಲ್ಲೆಂದರಲ್ಲಿ ಸಿನಿಮಾ ಜಾಹಿರಾತು ಸೇರಿದಂತೆ ಅನಧಿಕೃತ ಬ್ಯಾನರ್, ಪೋಸ್ಟರ್‌ಗಳು ತಲೆ ಎತ್ತುತ್ತಿವೆ. ಈ ಬಗ್ಗೆ ಪಾಲಿಕೆಯಾಗಲಿ ಅಥವಾ ಪೊಲೀಸ್ ಇಲಾಖೆ ಗಮನಹರಿಸಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ, ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳುತ್ತಿದ್ದೀರಿ. ಆದರೆ ಮಾಧ್ಯಮಗಳ ವರದಿ ಗಮನಿಸಿದರೆ ಮತ್ತೆ ಎಲ್ಲೆಂದರಲ್ಲಿ ಅನಧಿಕೃತ ಪೋಸ್ಟರ್, ಬ್ಯಾನರ್ ಹಾಕಲಾಗುತ್ತಿದೆ. ಅಂತಹವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ, ಎಷ್ಟು ಕೇಸುಗಳನ್ನು ದಾಖಲು ಮಾಡಿದ್ದೀರಿ ಎಂದು ವಿವರ ಕೊಡಿ ಎಂದು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿದರು.
ನೋಡಲ್ ಅಧಿಕಾರಿ ನೇಮಕ: ನಗರದಲ್ಲಿ ಅನಧಿಕೃತ ಬ್ಯಾನರ್, ಪೋಸ್ಟರ್ ಸೇರಿ ಇನ್ನಿತರ ಜಾಹಿರಾತುಗಳ ಬಗ್ಗೆ ನಿಗಾ ವಹಿಸಲು ನೋಡಲ್ ಅಧಿಕಾರಿ ನೇಮಿಸಲು ಕೋರ್ಟ್ ಆದೇಶಿಸಿತು. ಅದರ ಪಾಲನೆ ಆಗಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ (ಅಪರಾಧ) ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಳಿದ ಎಲ್ಲ 8 ಡಿಸಿಪಿಗಳು ಅವರಿಗೆ ಸಹಕಾರ ನೀಡುತ್ತಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದ ಅಡ್ವೋಕೇಟ್ ಜನರಲ್ ತಿಳಿಸಿದರು.
ನೀತಿ ಅಂತಿಮಗೊಳಿಸಿ: ಜಾಹಿರಾತು ನೀತಿ ಮತ್ತು ಬೈಲಾ ಬಗ್ಗೆ ಬಿಬಿಎಂಪಿಯಿಂದ ಕೆಲವೊಂದು ಸ್ಪಷ್ಟನೆಗಳನ್ನು ಕೇಳಿ, ಅದನ್ನು ಜ.14ಕ್ಕೆ ಕಳಿಸಿಕೊಡಲಾಗಿದೆ ಎಂದು ಅಡ್ವೋಕೇಟ್ ಜನರಲ್ ಹೇಳಿದರು.
ಇನ್ನೆರಡು ದಿನಗಳಲ್ಲಿ ಸ್ಪಷ್ಟನೆಗಳನ್ನು ಸರ್ಕಾರಕ್ಕೆ ಸ್ಪಷ್ಟನೆಗಳನ್ನು ಕಳಿಸಿಕೊಡಲಾಗುವುದು ಎಂದು ಬಿಬಿಎಂಪಿ ಪರ ವಕೀಲರು ಭರವಸೆ ನೀಡಿದರು. ಎರಡು ವಾರಗಳಲ್ಲಿ ಜಾಹಿರಾತು ನೀತಿ ಅಂತಿಮಗೊಳಿಸಿ ಎಂದು ತಾಕೀತು ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿತು.
‘ಸೀತಾರಾಮ ಕಲ್ಯಾಣ’ ಪೋಸ್ಟರ್ ಪ್ರಸ್ತಾಪ
ಊರ್ವಶಿ ಚಿತ್ರಮಂದಿರದ ಪಕ್ಕದಲ್ಲಿನ ಪಾದಚಾರಿ ಮಾರ್ಗದ ಮೇಲೆ ನಿಖೀಲ್ ಕುಮಾರಸ್ವಾಮಿ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರದ ಪೋಸ್ಟರ್ ಹಾಕಿದ್ದನ್ನು ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಶುಕ್ರವಾರ ಹೈಕೋರ್ಟ್‌ನಲ್ಲಿ ಪ್ರಸ್ತಾಪಿಸಿದರು. ವಿಚಾರಣೆ ವೇಳೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯಪೀಠದ ಮುಂದೆ, ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಪಾದಚಾರಿ ಮಾರ್ಗದ ಮೇಲೆ ಪೋಸ್ಟರ್ ಹಾಕಿರುವ ವಿಷಯ ಗಮನಕ್ಕೆ ತಂದರು. ”ಊರ್ವಶಿ ಚಿತ್ರ ಮಂದಿರಕ್ಕೆ ಹೊಂದಿಕೊಂಡಿರುವ ಪಾದಚಾರಿ ಮಾರ್ಗದ ಮೇಲೆ ಗುರುವಾರ ಬೆಳಿಗ್ಗೆ ನಿಖೀಲ್ ಕುಮಾರಸ್ವಾಮಿ ಅಭಿನಯದ ಚಿತ್ರದ ಪೋಸ್ಟರ್ ಹಾಕಲಾಗಿತ್ತು. ಆ ಬಗ್ಗೆ ಬಿಬಿಎಂಪಿಗೆ ವಾಟ್ಸಾಪ್ ಮೂಲಕ ದೂರು ನೀಡಲಾಗಿತ್ತು. ಗುರುವಾರ ಮಧ್ಯಾಹ್ನ ಅದನ್ನು ತೆರವುಗೊಳಿಸಿ, ಪಾಲಿಕೆ ಅಧಿಕಾರಿಗಳು ತಮಗೆ ಮಾಹಿತಿ ನೀಡಿದ್ದರು. ಆದರೆ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ಪೋಸ್ಟರ್ ಹಾಕಲಾಗಿದೆ. ಆ ಬಗ್ಗೆಯೂ ಪಾಲಿಕೆಗೆ ದೂರು ನೀಡಲಾಗಿದೆ”ಎಂದು ಅವರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಹೈಕೋರ್ಟ್‌ಗೆ ಪ್ರಮಾಣ ಪತ್ರ
ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ ಮಳೆ ನೀರು ಕಾಲುವೆಗಳಿಗೆ ಒಳಚರಂಡಿ ನೀರು ಹರಿದು ಹೋಗುವ 914 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಕಾಮಗಾರಿ ಕೈಗೊಳ್ಳಲು 76.55 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರದಲ್ಲಿ ಮಳೆ ನೀರು ಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಸಿಟಿಜನ್ ಆ್ಯಕ್ಷನ್ ಗ್ರೂಪ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯಪೀಠಕ್ಕೆ ಬೆಂಗಳೂರು ಜಲಮಂಡಳಿಯ ಮುಖ್ಯ ಇಂಜಿನಿಯರ್ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮಳೆ ನೀರು ಕಾಲುವೆಗಳಿಗೆ ಒಳಚರಂಡಿ ನೀರು ಹರಿದು ಹೋಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವ ಕ್ರಮಗಳ ಬಗ್ಗೆ ಈವರೆಗೆ 10 ಕಾರ್ಯಪ್ರಗತಿಯ ವಸ್ತುಸ್ಥಿತಿ ವರದಿಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಮಳೆ ನೀರು ಕಾಲುವೆಗಳಿಗೆ ಒಳಚರಂಡಿ ನೀರು ಹರಿದು ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಜಲಮಂಡಳಿ ಬದ್ಧವಾಗಿದೆ. ಈ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.