ರುದ್ರೇಶ್ ಹತ್ಯೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Jul 28, 2018, 11:43 AM IST
ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಆರ್. ರುದ್ರೇಶ್ ಹತ್ಯೆ ಪ್ರಕರಣದ 5ನೇ ಆರೋಪಿ ಆಸೀಂ ಶರೀಫ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ತನ್ನ ವಿರುದ್ಧ ಮಾಡಿರುವ ಆರೋಪಗಳನ್ನು ಕೈಬಿಡುವಂತೆ ಕೋರಿ ಆಸೀಂ ಶರೀಫ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎನ್.ಕೆ. ಸುಧೀಂದ್ರರಾವ್ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದರು.
ವಿಚಾರಣೆ ವೇಳೆ ವಾದ ಮಂಡಿಸಿದ ಎನ್‌ಐಎ ವಕೀಲರು, ಆರೋಪಿ ತಾನು ಪಿಎಫ್ಐ ಸದಸ್ಯ ಎಂದು ಒಪ್ಪಿಕೊಂಡಿದ್ದಾನೆ. ಜತೆಗೆ ಆತನಿಗೆ ಪಥಸಂಚಲನದ ಬಗ್ಗೆ ಮಾಹಿತಿ ಇತ್ತು.
ಆಸೀಂ ಶರೀಫ್ ನಿಷೇಧಿತ ಇಂಡಿಯನ್ ಮುಜಾಹಿದೀನ್ ಹಾಗೂ ಸಿಮಿ ಸಂಘಟನೆಯ ಸೈಯದ್ ಇಸ್ಮಾಯಿಲ್‌ನೊಂದಿಗೆ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ರುದ್ರೇಶ್ ಬಗ್ಗೆ ಆತನಿಗೆ ವೈಯಕ್ತಿಕ ದ್ವೇಷ ಇರಲಿಲ್ಲ.
ಆತನ ಸಂಘಟನೆ ಮತ್ತು ಸಿದ್ಧಾಂತಕ್ಕಾಗಿ ಕೊಲೆ ಮಾಡಲಾಗಿದೆ. ಇದೊಂದು ಪೂರ್ವಯೋಜಿತ ಕೃತ್ಯ. ಹಾಗಾಗಿ ಆರೋಪಿತನ ವಿರುದ್ಧದ ಆರೋಪಗಳನ್ನು ಕೈಬಿಡಬಾರದು, ಆತನ ಅರ್ಜಿ ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಅರ್ಜಿದಾರನ ಪಾತ್ರವಿಲ್ಲ: ಇದೇ ವೇಳೆ ಆರೋಪಿ ಪರ ವಕೀಲರು ವಾದ ಮಂಡಿಸಿ, “ಕೊಲೆ ಪ್ರಕರಣಕ್ಕೂ ಅರ್ಜಿದಾರರಿಗೂ ಸಂಬಂಧವಿಲ್ಲ. ಘಟನೆ ನಡೆದ ಸ್ಥಳದಲ್ಲಿ ಆರೋಪಿ ಇರಲಿಲ್ಲ. ಅರ್ಜಿದಾರರಿಗೆ ಪಿಎಫ್‌ಐ ಸಂಘಟನೆಯ ನಂಟಿದೆ ಎಂದಾದರೂ, ಅದು ನಿಷೇಧಿತ ಸಂಘಟನೆಯಲ್ಲ.
ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಅವರ ವಿರುದ್ಧದ ಆರೋಪಗಳನ್ನು ಕೈಬಿಡಬೇಕು’ ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು.
ಆರೆಸ್ಸೆಸ್ ಪಥಸಂಚಲನ ಮುಗಿಸಿಕೊಂಡು ಸ್ನೇಹಿತರೊಂದಿಗೆ ಮಾತನಾಡುತ್ತ ಶಿವಾಜಿನಗರದ ಕಾಮರಾಜ್ ರಸ್ತೆಯಲ್ಲಿ ನಿಂತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಮುಸುಕಧಾರಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು 2016ರ ಅ.16ರಂದು ರುದ್ರೇಶ್‌ನನ್ನು ಹತ್ಯೆ ಮಾಡಿದ್ದರು.
ಈ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ವಿಚಾರಣೆ ನಡೆಸಿದ ಎನ್‌ಐಎ ದೋಷಾರೂಪಣ ಪಟ್ಟಿ ಸಲ್ಲಿಸಿತ್ತು.
ತನ್ನ ವಿರುದ್ಧ ಎನ್‌ಎಐ ಮಾಡಿರುವ ಆರೋಪಗಳನ್ನು ಕೈಬಿಡುವಂತೆ ಆಸೀಂ ಶರೀಫ್ ಸಲ್ಲಿಸಿದ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಳ್ಳಿ ಹಾಕಿತ್ತು. ಇದನ್ನು ಪ್ರಶ್ನಿಸಿ ಆತ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ನ್ಯಾಯಪೀಠ, ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.