ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ಶೋಭಾ ವಾಗ್ಧಾಳಿ
Team Udayavani, Jan 7, 2018, 6:45 AM IST
ಬೆಂಗಳೂರು: ಸಾಧನಾ ಸಮಾವೇಶದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರದ ಹಣವನ್ನು ರಾಜಕೀಯ ಪಕ್ಷದ ಚಟುವಟಿಕೆಗೆ ಬಳಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಆಡಳಿತ ಪಕ್ಷವು ರಾಜ್ಯ ಸರ್ಕಾರದ ಹಣವನ್ನು ರಾಜಕೀಯ ಚಟುವಟಿಕೆಗೆ ಬಳಸಬಾರದು ಎಂದು 2013ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. 80 ವಿಧಾನಸಭಾ ಕ್ಷೇತ್ರದಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರವೇ ಸಮಾವೇಶದ ವೆಚ್ಚಭರಿಸುತ್ತಿದೆ. ಜಿಲ್ಲಾಧಿಕಾರಿಗಳು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ವಿರೋಧಪಕ್ಷಗಳನ್ನು ಟೀಕಿಸಲು ಮತ್ತು ಪ್ರಧಾನಿ ಮೋದಿಯವರನ್ನು ತೆಗಳಲು ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುವುದೇ ಸರ್ಕಾರದ ಸಾಧನೆ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಜಿಲ್ಲಾಡಳಿತದ ಮೇಲೆ ಒತ್ತಡ ಹೇರಿ, ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದೂರಿದರು.
ಸರ್ಕಾರದ ವೆಚ್ಚದಲ್ಲಿ ರಾಜಕೀಯ ಸಭೆಗಳನ್ನು ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಸಂಬಂಧ ರಾಜ್ಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ಅದು ಸೋಮವಾರ ವಿಚಾರಣೆಗೆ ಬರಲಿದೆ. ಮುಖ್ಯಮಂತ್ರಿಗಳು ತಕ್ಷಣವೇ ಸರ್ಕಾರಿ ಪ್ರಾಯೋಜಿತ ಚುನಾವಣಾ ಪ್ರಚಾರ ಸಭೆಯನ್ನು ರದ್ದುಮಾಡಬೇಕು. ರಾಜಕೀಯ ಸಭೆಗಾಗಿ ಸರ್ಕಾರದಿಂದ ಮಾಡಿದ ವೆಚ್ಚವನ್ನು ಕಾಂಗ್ರೆಸ್ ಪಕ್ಷದಿಂದ ವಸೂಲಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ತುಂಬಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.