ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ತಾತ್ಕಾಲಿಕ ಸ್ಥಗಿತ!
Team Udayavani, Dec 24, 2017, 11:07 AM IST
ಬೆಂಗಳೂರು: ನಗರದ ಹಲವು ಪ್ರದೇಶಗಳ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಏಕಕಾಲಕ್ಕೆ ನಡೆಯುತ್ತಿರುವ ವೈಟ್‌ಟಾಪಿಂಗ್ ಕಾಮಗಾರಿಯಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿ ಜನ ಹೈರಾಣಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ವೈಟ್‌ಟಾಪಿಂಗ್ ಕಾಮಗಾರಿಗೆ ದಿಢೀರ್ ತಾತ್ಕಾಲಿಕ ಬ್ರೇಕ್ ಹಾಕಲು ನಿರ್ಧರಿಸಿದೆ.
ನಗರದ ರಸ್ತೆಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಮುಖ ರಸ್ತೆಗಳನ್ನು ವೈಟ್ ಟಾಪಿಂಗ್‌ನಡಿ ಅಭಿವೃದ್ಧಿಪಡಿಸಲು ಪಾಲಿಕೆ ಮುಂದಾಗಿತ್ತು. ಆದರೆ, ಹಲವೆಡೆ ಪ್ರಮುಖ ರಸ್ತೆಗಳಲ್ಲಿ ಏಕಕಾಲಕ್ಕೆ ಕಾಮಗಾರಿ ಆರಂಭವಾಗಿದ್ದರಿಂದ ಪರ್ಯಾಯ ಮಾರ್ಗಗಳೇ ಇಲ್ಲದಂತಾಗಿದ್ದು, ಕಾಮಗಾರಿ ಸ್ಥಳದಲ್ಲೇ ಸಂಚರಿಸುವುದು ಅನಿವಾರ್ಯವಾಗಿತ್ತು. ಇದರಿಂದ ಜನ ಬೇಸತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಈ ನಿರ್ಧಾರಕ್ಕೆ ಮುಂದಾಗಿದೆ.
ಹೊರವರ್ತುಲ ರಸ್ತೆಗಳು ಸೇರಿದಂತೆ ಒಟ್ಟು 29 ರಸ್ತೆಗಳನ್ನು ಪಾಲಿಕೆ ವೈಟ್‌ಟಾಪಿಂಗ್‌ನಡಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಾಲನೆ ನೀಡಿತ್ತು. 972.69 ಕೋಟಿ ರೂ. ವೆಚ್ಚದಲ್ಲಿ ಒಟ್ಟು 93.47 ಕಿಲೋ ಮೀಟರ್ ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಎರಡು ಕಂಪನಿಗಳಿಗೆ ವಹಿಸಲಾಗಿದೆ.
ದಿನದ ಬಹುಪಾಲು ಹೊತ್ತು ವಾಹನ ಸಂಚಾರ ತೀವ್ರವಾಗಿರುವ ಮೈಸೂರು ರಸ್ತೆ, ಹೊಸೂರು ರಸ್ತೆ ಹಾಗೂ ನಾಗವಾರ ಹೊರವರ್ತುಲ ರಸ್ತೆಗಳಲ್ಲಿ ಏಕಕಾಲಕ್ಕೆ ಕಾಮಗಾರಿ ನಡೆಯುತ್ತಿದೆ. ಪರಿಣಾಮವಾಗಿ ಕಿಲೋ ಮೀಟರ್‌ಗಟ್ಟಲೇ ದಟ್ಟಣೆಯಾಗುತ್ತಿದ್ದು, ವಾಹನ ಬಳಕೆದಾರರು ಗಂಟೆಗಟ್ಟಲೇ ದೂಳಿನ ನಡುವೆ ರಸ್ತೆಯಲ್ಲಿ ಇರುವಂತಾಗಿದೆ. ಕೆಲವೆಡೆ ಪರ್ಯಾಯ ಮಾರ್ಗಗಳಲ್ಲೂ ಕೆಲಸ ನಡೆದಿರುವುದರಿಂದ ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಗಳಲ್ಲೇ ಸಂಚರಿಸುವುದು ಅನಿವಾರ್ಯವಾಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.
ಮೈಸೂರು ರಸ್ತೆ, ಹೊಸೂರು ರಸ್ತೆ ಹಾಗೂ ಹೆಣ್ಣೂರು ಜಂಕ್ಷನ್‌ಗಳಲ್ಲಿ ಜನ ಅನುಭವಿಸುತ್ತಿರುವ ತೊಂದರೆ, ಆ್ಯಂಬಲೆನ್ಸ್‌ಗಳ ಸಂಚಾರಕ್ಕೆ ಉಂಟಾಗಿರುವ ಅಡಚಣೆಗಳ ಬಗ್ಗೆ ಸಾರ್ವಜನಿಕರು, ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಫೇಸ್‌ಬುಕ್, ಟ್ವಿಟ್ಟರ್ ಖಾತೆಗಳಿಗೆ ನಿರಂತರವಾಗಿ ದೂರು ನೀಡುತ್ತಿದ್ದಾರೆ. ಜತೆಗೆ ತ್ವರಿತ ವಾಗಿ ಸಮಸ್ಯೆ ಬಗೆಹರಿಸುವಂತೆಯೂ ಒತ್ತಾಯಿಸಿದ್ದಾರೆ.
ಅಧಿಕಾರಿಗಳಿಗೆ ತರಾಟೆ: ಕಾಮಗಾರಿಯಿಂದಾಗುತ್ತಿರುವ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದ ಅಧಿಕಾರಿಗಳನ್ನು ಶುಕ್ರವಾರದ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಲಮಿತಿಯೊಳಗೆ ಕಾಮಗಾರಿ ಮುಗಿಸದ ಕಾರಣ ಜನ ತೊಂದರೆ ಅನುಭವಿಸುವಂತಾಗಿದೆ. ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ವಿಫಲವಾಗಿರುವುದರಿಂದ ಅನಿವಾರ್ಯವಾಗಿ ಕಾಮಗಾರಿಗಳಿಗೆ ತಾತ್ಕಾಲಿಕ ತಡೆ ನೀಡಲು ಸೂಚಿಸಿದ್ದಾರೆ ಎಂದು ಸಭೆಯಲ್ಲಿದ್ದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾತ್ಕಾಲಿಕ ಸ್ಥಗಿತ: ಮೊದಲ ಹಂತದಲ್ಲಿ 281 ಕೋಟಿ ರೂ. ವೆಚ್ಚದಲ್ಲಿ ಐದು ಮಾರ್ಗಗಳ 39.80 ಕಿ.ಮೀ. ಉದ್ದದ ವೈಟ್‌ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ನೀಡಲಾಗಿತ್ತು. ಅದರಂತೆ ಮೈಸೂರು ರಸ್ತೆ, ಹೊಸೂರು ರಸ್ತೆ, ನಾಗವಾರ ಹೊರವರ್ತುಲ ರಸ್ತೆ, ವಿಜಯನಗರ ಮೆಟ್ರೊ ಸ್ಟೇಷನ್ ಹಾಗೂ ಕೋರಮಂಗಲ 20ನೇ ಮುಖ್ಯರಸ್ತೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಈವರೆಗೆ ಐದೂ ರಸ್ತೆಗಳಲ್ಲಿ ಒಟ್ಟು 9 ಕಿ.ಮೀ. ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ. ಆ ಬಳಿಕ ವೈಟ್‌ಟಾಪಿಂಗ್ ಸ್ಥಗಿತಕ್ಕೆ ಪಾಲಿಕೆ ನಿರ್ಧರಿಸಿದೆ.
2 ಸಂಸ್ಥೆಗಳ ಕಾಮಗಾರಿ ಬಿಎಂಆರ್‌ಸಿಎಲ್ ಸಂಸ್ಥೆಯಿಂದ ಮೈಸೂರು ರಸ್ತೆ ಹಾಗೂ ಹಳೆ ಮದ್ರಾಸ್ ರಸ್ತೆಗಳಲ್ಲಿ ಮೆಟ್ರೋ
ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದಾಗಿ ಈ ಹಿಂದೆಯೇ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದೀಗ ಪಾಲಿಕೆಯು ವೈಟ್‌ಟಾಪಿಂಗ್ ಕಾಮಗಾರಿ ಕೈಗೊಂಡಿರುವುದರಿಂದ ಮತ್ತಷ್ಟು ದಟ್ಟಣೆ ಉಂಟಾಗುತ್ತಿದೆ.
ಇದರೊಂದಿಗೆ ವೈಟ್‌ಟಾಪಿಂಗ್ ನಡೆಯುತ್ತಿರುವ ಸಮೀಪದ ರಸ್ತೆಗಳಲ್ಲಿಯೂ ಇತರೆ ಕಾಮಗಾರಿ ನಡೆದಿರುವುದರಿಂದ ಪರ್ಯಾಯ ಮಾರ್ಗಗಳಿಲ್ಲದಿರುವುದು ಸಮಸ್ಯೆಗೆ ಕಾರಣವಾಗಿದೆ.
● ವೆಂ. ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.