ಗಾಂಧೀಜಿ ಜೀವನ ಸಂದೇಶ ಯುವಕರಿಗೆ ಸ್ಫೂರ್ತಿ
Team Udayavani, Oct 3, 2020, 12:35 PM IST
ದೇವನಹಳ್ಳಿ: ಸರ್ವ ಧರ್ಮಗಳನ್ನು ಒಗ್ಗೂಡಿಸಿ ಅಹಿಂಸೆ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ ಸಂದೇಶ, ತತ್ವಾದರ್ಶ ಯುವ ಜನತೆಗೆ ಸ್ಫೂರ್ತಿದಾಯಕ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ, ಮಹಾತ್ಮ ಗಾಂಧೀಜಿ ಅವರ 152ನೇ ಜನ್ಮ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರು, ಭಾರತದ 2ನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 117ನೇ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಎಂಬ ಕನಸನ್ನು ಹೊಂದಿದ್ದ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಸರಳ ಜೀವನದ ಜತೆಗೆ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದರು. ಹೀಗಾಗಿ ಪ್ರತಿಯೊಬ್ಬ ನಾಗರಿಕರು ಸಾರ್ವಜನಿಕಸ್ಥಳಗಳಲ್ಲಿ ಸ್ವತ್ಛತೆ ಕಾಪಾಡಲು ಕೈಜೋಡಿಸಬೇಕು. ಅಲ್ಲದೇ, ಪ್ರತಿ ಮನೆಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜೈ ಜವಾನ್-ಜೈ ಕಿಸಾನ್ ಎಂಬ ಜನಪ್ರಿಯ ಘೋಷವಾಕ್ಯ ನೀಡಿದ, ದೇಶದ2ನೇ ಪ್ರಧಾನಿಯಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಇಂದೇ ಆಗಿದ್ದು, ಶಾಸ್ತ್ರಿ ಅವರು ಪ್ರಧಾನಮಂತ್ರಿಗಳಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದರಲ್ಲದೆ, ದೇಶಕ್ಕೆ ಅಪಾರಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್. ಮಹೇಶ್, ವಾರ್ತಾ ಸಹಾಯಕರಾದ ಹೇಮಾವತಿ ಜೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಮಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ, ಜಿಲ್ಲಾ ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕ ಎಸ್. ಸುಬ್ಬರಾವ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.