![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 30, 2019, 3:00 AM IST
ಹೊಸಕೋಟೆ: ಸರಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಗ್ರಾಮಸಭೆ ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವರ್ಣ ವೆಂಕಟೇಶ್ ಹೇಳಿದರು. ಅವರು ದೇವನಗೊಂದಿಯಲ್ಲಿ ಏರ್ಪಡಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಲಾಗುತ್ತಿದೆ . ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 400 ಕುಟುಂಬಗಳು ನೋಂದಣಿಯಾಗಿದ್ದು ರಸ್ತೆ, ಚರಂಡಿ, ಕೆರೆ ಕುಂಟೆ ಅಭಿವೃದ್ಧಿ, ಬದು ನಿರ್ಮಾಣದಂತಹ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಸರಕಾರದ ವಸತಿ ಯೋಜನೆಗಳಡಿ 185 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು ಅನುದಾನ ಬಿಡುಗಡೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾರ್ವಜನಿಕರ ಅಗತ್ಯತೆಗಳಿಗೆ ಅನುಗುಣವಾಗಿ ಕ್ರಿಯಾಯೋಜನೆ ಸಿದ್ಧಪಡಿಸಲು ಅಭಿಪ್ರಾಯ ಸಂಗ್ರಹಿಸುವುದು ಗ್ರಾಮ ಸಭೆಯ ಪ್ರಮುಖ ಉದ್ದೇಶವಾಗಿದೆ. ಗ್ರಾಮಸ್ಥರು ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅವಶ್ಯಕತೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಸಹಾಯಕ ಕೃಷಿ ಅಧಿಕಾರಿ ಡಿ. ರಾಮಯ್ಯ ಮಾತನಾಡಿ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ರಾಗಿ ಬೆಳೆಗೆ ಹೆಚ್ಚು ಅನುಕೂಲವಾಗಿದೆ. ತೇವಾಂಶ ವ್ಯರ್ಥವಾಗದಂತೆ ಎಚ್ಚರವಹಿಸಿ ಬೆಳೆಗಳನ್ನು ಪೋಷಿಸಲು ಗಮನಹರಿಸಬೇಕು. ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರು ಕೃಷಿ ಹೊಂಡ ನಿರ್ಮಾಣದಂತಹ ಸೌಲಭ್ಯಗಳನ್ನು ಒದಗಿಸಲಾಗಿದ್ದು ರಿಯಾಯಿತಿ ದರದಲ್ಲಿ ಯಂತ್ರೋಪಕರಣಗಳನ್ನು ಸಹ ಪಡೆಯಬಹುದಾಗಿದೆ.
ಹೋಬಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ಪದ್ದತಿಯ ಬಗ್ಗೆ ರೈತರಿಗೆ ಅಗತ್ಯ ಮಾಹಿತಿ ನೀಡಲಾಗುವುದು ಎಂದರು. ಖಾಜಿ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಆನಂದ್ ಮಾತನಾಡಿ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು.
ಇಲಾಖೆ ವತಿಯಿಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಲಾಖೆ ಹಾಗೂ ಆಶಾ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಮಾಹಿತಿಯುಳ್ಳ ಕರಪತ್ರಗಳನ್ನು ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಜ್ವರದಂತಹ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯವಹಿಸದೆ ತಕ್ಷಣ ವೈದ್ಯರಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು ಎಂದರು
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ್, ಸದಸ್ಯರುಗಳು, ನೋಡಲ್ ಅಧಿಕಾರಿ ಜಿಲ್ಲಾ ಪಂಚಾಯಿತಿ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸೈಯದ್ ಜಾವಿದ್, ರೇಷ್ಮೆ, ಇಲಾಖೆಯ ಅಧಿಕಾರಿಗಳು, ಪಿಡಿಓ ತಿಮ್ಮೇಗೌಡ ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.