ಮುನ್ನೆಚ್ಚರಿಕೆ ವಹಿಸಿ ಬಕ್ರೀದ್ ಆಚರಿಸಿ
Team Udayavani, Jul 27, 2020, 12:36 PM IST
ಬೀದರ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆ.1ರಂದು ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ಆಚರಣೆ ವೇಳೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಈದ್ಗಾಗಳಲ್ಲಿ ನಿರ್ವಹಿಸುವುದನ್ನು ನಿರ್ಬಂಧಿಸಲಾಗಿದೆ. ಹಬ್ಬದಂದು ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಚಿಸುವಂತಹ ಮಸೀದಿಗಳ ಆಡಳಿತ ಸಮಿತಿಗಳು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆಯಾ ಮಸೀದಿಗಳಲ್ಲಿ ಗರಿಷ್ಠ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಅವಕಾಶವಿರುತ್ತದೆ. ಒಂದು ವೇಳೆ ಹೆಚ್ಚಿನ ಜನರು ಆಗಮಿಸಿದಲ್ಲಿ ಎರಡು ಅಥವಾ ಮೂರು ಬ್ಯಾಚ್‌ಗಳಲ್ಲಿ ಆಯಾ ಮಸೀದಿಗಳಲ್ಲಿಯೇ ನಮಾಜ್ ನಿರ್ವಹಿಸಲು ಅವಕಾಶವಿರುತ್ತದೆ. ಮಸೀದಿಗಳನ್ನು ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಎನ್ನುವ ನಿರ್ದೇಶನಗಳನ್ನು ಈಗಾಗಲೇ ನೀಡಲಾಗಿದೆ. ಇವುಗಳನ್ನು ತಪ್ಪದೇ ಪಾಲಿಸಬೇಕು ಎಂದು ಕೋರಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಡೆಸಲಾಗುವ ಪ್ರಾರ್ಥನಾ ಸ್ಥಳಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡುವುದು ಸುರಕ್ಷಿತ. ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು ಅನಿವಾರ್ಯ. ಕೈಗಳನ್ನು ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಬೇಕು. ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟಬಾರದು. ಹಸ್ತಲಾಘವ ಮತ್ತು ಆಲಿಂಗನ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಉಸ್ತುವಾರಿ ಸಚಿವರ ಪ್ರವಾಸ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜು.27ರಿಂದ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 9:30ಕ್ಕೆ ಘಮಸುಬಾಯಿ ತಾಂಡಾದಿಂದ ಹೊರಟು ಬೀದರಗೆ ಆಗಮಿಸುವರು. ಬಳಿಕ 11 ಗಂಟೆಗೆ ರಂಗಮಂದಿರದಲ್ಲಿ ನಡೆಯುವ ಸಿಎಂ ಡಿಜಿಟಲ್ ಸಂವಾದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಡಿಸಿ ಕಚೇರಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಏರ್ಪಡಿಸಿರುವ ಸಭೆಯಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಘಮಸುಬಾಯಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡುವರು. ಜು.28 ರಂದು ಘಮುಸುಬಾಯಿ ತಾಂಡಾ ಬೋಂತಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕರಿಸುವರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.