ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಿ
Team Udayavani, Dec 4, 2019, 11:39 AM IST
ಚಾಮರಾಜನಗರ: ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಲ್ಲಿ ತೀವ್ರವಾಗಿದೆಯೋ ಹಾಗೂ ಅವಶ್ಯಕತೆ ಇದೆಯೋ ಅಂತಹ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಪರಿಹಾರವಾಗಬೇಕು. ಯಾವುದೇ ತಾರತಮ್ಯಕ್ಕೆ ಅವಕಾಶವಿಲ್ಲದ ಹಾಗೆ ಎಲ್ಲಾ ಭಾಗಗಳಲ್ಲೂ ನೀರಿನ ಬವಣೆ ನೀಗಿಸಲು ಕ್ರಮ ತೆಗೆದುಕೊಳ್ಳಬೇಕು.
ಅವಶ್ಯಕತೆಗಳಿಗೆ ಅನುಗುಣವಾಗಿ ಅನುದಾನ ಬಳಕೆಯಾಗಬೇಕು. ಕುಡಿಯುವ ನೀರಿನ ಬೇಡಿಕೆಗಳಿಗೆ ಸ್ಪಂದಿಸಿ ಪರಿಹಾರಗಳಿಗೆ ಮುಂದಾಗಬೇಕು ಎಂದು ತಿಳಿಸಿದರು.
ಗ್ರಾಮಗಳಿಗೆ ಸಮರ್ಪಕ ಪರಿಹಾರ ನೀಡಿ: ಕೈಗಾರಿಕೆ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಚೆನ್ನಪ್ಪ ಮಾತನಾಡಿ, ಹಲವು ಗ್ರಾಮಗಳಲ್ಲಿ ಅಳವಡಿಸಿರುವ ಪೈಪ್‌ಲೈನ್ ಹಳೆಯದಾಗಿದೆ. ಇನ್ನೂ ಹಲವು ಭಾಗಗಳಿಗೆ ನೀರು ಒದಗಿಸಬೇಕಿದೆ. ಜಿಲ್ಲೆಯ ಎಲ್ಲಾ ಭಾಗಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಸಮರ್ಪಕವಾಗಿ ಪರಿಹಾರ ಒದಗಿಸಬೇಕಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗದಮಣಿ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾವತಿ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಪರಿಶೀಲಿಸಬೇಕು. ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಬೇಕು. ನೀರು ಪೂರೈಕೆಗೆ ಅವಶ್ಯವಿರುವ ಅನುದಾನ ಬಳಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್. ನಾರಾಯಣ ರಾವ್, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ರವಿಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.