ಅರಣ್ಯದ ತೊಟ್ಟಿಗಳಲ್ಲಿ ನೀರು ಶೇಖರಿಸಲು ಸೂಚನೆ
Team Udayavani, Mar 3, 2019, 7:47 AM IST
ಚಿಕ್ಕಬಳ್ಳಾಪುರ: ಬರುವ ಮುಂಗಾರು ಹಂಗಾಮಿನ ತನಕವೂ ಬೇಸಿಗೆಯಲ್ಲಿ ಜನತೆ ಹಾಗೂ ಜಾನುವಾರುಗಳ ಬಗ್ಗೆ ಗಮನ ಹರಿಸಿ ಗ್ರಾಮೀಣ ಭಾಗಗಳಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಲಭ್ಯವಿರುವ ನೀರಿನ ತೊಟ್ಟಿಗಳಲ್ಲಿ ನೀರನ್ನು ಪ್ರತಿದಿನ ಶೇಖರಿಸಲು ಶಾಸಕ ಡಾ.ಕೆ.ಸುಧಾಕರ್ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ತಾಲೂಕಿನ ಗ್ರಾಪಂ ಅಧ್ಯಕ್ಷರ ಹಾಗೂ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಪಂವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪಿಡಿಒಗಳು ಪ್ರತಿ ದಿನ ಬೆಳಗ್ಗೆ 10 ಗಂಟೆಗೆ ಗ್ರಾಪಂ ಕಚೇರಿಗಳಿಗೆ ಬಂದು ಬಯೋಮೆಟ್ರಿಕ್ ಹಾಜರಾತಿ ನೀಡಿದ ಬಳಿಕ ಇತರೆ ಕೆಲಸಗಳಿಗೆ ತೆರಳಬೇಕೆಂದು ಸೂಚಿಸಿದರು.
95 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಬೇಸಿಗೆ ಪ್ರಾರಂಭದಲ್ಲಿಯೇ ಕ್ಷೇತ್ರದಾದ್ಯಂತ ಸುಮಾರು 95 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಪ್ರಾರಂಭವಾಗಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಶಾಸಕರು, ಈ ಕುರಿತು ಅಧಿಕಾರಿಗಳು ಎಚ್ಚೆತ್ತು ಸಮಸ್ಯೆ ಇರುವ ಹಳ್ಳಿಗಳಲ್ಲಿ ಟ್ಯಾಂಕರ್ ಅಥವಾ ಹೊಸ ಕೊಳವೆ ಬಾವಿ ಕೊರೆಸಲು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.
ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ತಿಪ್ಪೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಜಕ್ಕಲಮಡಗು ಕುಡಿಯುವ ನೀರು ಸರಬರಾಜು ಪೈಪ್‌ಲೈನ್ ಕಾಮಗಾರಿಗೆ ಭೂಮಿಪೂಜೆ ನಡೆಸಿ 4 ತಿಂಗಳಾದರೂ ಕಾಮಗಾರಿ ಆರಂಭಿಸದ ಗುತ್ತಿಗೆದಾರನ ವಿರುದ್ಧ ಕಿಡಿಕಾರಿದ ಶಾಸಕರು, ಸಂಬಂಧಿಸಿದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಬೇರೆಯವರ ಮುಖಾಂತರ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿ ಹತ್ತು ದಿನಗಳ ಕಾಲಾವಕಾಶ ನೀಡಿದರು. ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಬವಣೆ ತಪ್ಪಿಸಲು ಸ್ಥಳೀಯವಾಗಿ ಲಭ್ಯವಿರುವ ರೈತರ ಬೋರ್‌ವೆಲ್‌ಗಳನ್ನು ಪಡೆಯಲು ಅವರ ಮನವೊಲಿಸುವಂತೆ ಪಿಡಿಒ ಹಾಗೂ ಕಾರ್ಯನಿರ್ವಹಣಾಧಿಕಾರಿ ಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರುವ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಧೋರಣೆಯನ್ನು ಖಂಡಿಸಿದರು. ಗೌರಿಬಿದನೂರಿನ ಮಂಚೇನಹಳ್ಳಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರುತ್ತೆ ಎನ್ನುವುದನ್ನು ಮರೆಯಬೇಡಿ ಎಂದರು.
ಗಣಿಗಾರಿಕೆಗೆ ಬೇಸರ: ಇಂತಹ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆಗೆ ಸೂಕ್ತ ಪ್ರದೇಶವೆಂದು 2012 ರಲ್ಲಿ ಅಂದಿನ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಸೇರಿ ಸರ್ಕಾರಕ್ಕೆ ಶಿಫಾರಸು ಮಾಡಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ. ಇದರಿಂದ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ ರೈತರ ಬೆಳೆಗಳು ಕೈಗೆ ಸಿಗುತಿಲ್ಲ. ಇನ್ಮುಂದೆ ಕ್ಷೇತ್ರದಲ್ಲಿ ಕಲ್ಲು ಗಣಿಗಾರಿಕೆಯನ್ನು ವಿಸ್ತರಿಸಬಾರದು, ಹೊಸ ಪ್ರಸ್ತಾವನೆಗಳಿಗೆ ಅವಕಾಶ ನೀಡಬಾರದು ಎಂದು ಗ್ರಾಪಂ ಅಧಿಕಾರಿಗಳಿಗೆ ಎಚ್ಚರಿಸಿದರು
ಸಭೆಯಲ್ಲಿ ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ಇಒ ಸಂಜೀವಪ್ಪ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಕೆ.ಎಸ್.ಎನ್.ಭಟ್, ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹೇಮಂತ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಎಇಇ ಅನಿಲ, ಬೆಸ್ಕಾಂ ಅಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.