ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುಂದಾಗಿ: ಜಿಲ್ಲಾಧಿಕಾರಿ
ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ
Team Udayavani, May 12, 2022, 11:55 AM IST
ಗದಗ: ಜಿಲ್ಲೆಯಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖಾ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಐಡಿಎಸ್‌ಪಿ, ಎನ್‌ಆರ್ ಸಿಪಿ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೊಳ್ಳೆಗಳಿಂದ ಹರಡಬಹುದಾದ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ಹಾಗೂ ಮೆದುಳು ಜ್ವರ ಪ್ರಕರಣಗಳನ್ನು ತಡೆಗಟ್ಟಲು ಚರಂಡಿ, ಗಟಾರುಗಳಲ್ಲಿ ನೀರು ನಿಲ್ಲದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ನಿಂತ ನೀರಿನಲ್ಲಿ ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ಲಾರ್ವಾ ಸಮೀಕ್ಷೆ ತೀವ್ರಗೊಳಿಸಬೇಕೆಂದರು.
ನಿಯಮಿತವಾಗಿ ಕುಡಿಯುವ ನೀರಿನ ಮೂಲಗಳಿಂದ ಓಎಚ್‌ಟಿಗಳನ್ನು ವರ್ಷದಲ್ಲಿ 2 ಬಾರಿ ಸ್ವತ್ಛಗೊಳಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕ್ಲೋರಿನೇಷನ್ ಮಾಡಬೇಕು. ನಾಯಿ ಕಡಿತ ಸಂಬಂಧಿಸಿದಂತೆ ಲಸಿಕೆಗಳನ್ನು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ನಿಗದಿತ ಪ್ರಮಾಣದಲ್ಲಿ ಕಾಯ್ದಿರಿಸಲು ಸಂಬಂಧಿತ ಆರೋಗ್ಯ ಇಲಾಖೆಯ ಅನುಷ್ಠಾನಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ವ್ಯವಸ್ಥಿತವಾಗಿ ನಡೆಯಬೇಕು. ಮೂಲಭೂತ ಸೌಕರ್ಯಗಳು ಆಸ್ಪತ್ರೆಗೆ ಆಗಮಿಸುವ ಎಲ್ಲ ರೋಗಿಗಳಿಗೆ ದೊರಕಬೇಕು. ಈ ಬಗ್ಗೆ ಅಲ್ಲಿನ ವೈದ್ಯಾ ಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.
ಜಿಲ್ಲೆಯ ಮುಳಗುಂದ ಮತ್ತು ನರೇಗಲ್ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಪ್ರವೃತ್ತರಾಗಬೇಕೆಂದರು.
ಗದಗ ಹಾಗೂ ನರೇಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ಈ ಕೇಂದ್ರಗಳಲ್ಲಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಈ ಎರಡೂ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹುದ್ದೆ ಭರ್ತಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಈ ಆಸ್ಪತ್ರೆಗಳಿಗೆ ಬರುವ ರೋಗಿಗಳ ಚಿಕಿತ್ಸೆಗೆ ನೆರವಾಗುವಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.
ಮುಳಗುಂದ, ಹೊಳೆಆಲೂರ ಹಾಗೂ ಬೆಳ್ಳಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಆಸ್ಪತ್ರೆಗಳಿಗೆ ನಿವೇಶನ, ಕಟ್ಟಡ ಸೇರಿದಂತೆ ಇನ್ನಿತರ ಸೌಲಭ್ಯಗಳು ಮತ್ತು ಅಗತ್ಯ ವೈದ್ಯಕೀಯ ಸಿಬ್ಬಂದಿ ಪೂರೈಕೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಆರೋಗ್ಯ ಇಲಾಖಾಧಿಕಾರಿಗಳು ನಿರಂತರ ಸಮನ್ವಯ ಸಾಧಿಸುವಂತೆ ತಿಳಿಸಿದರು.
ಜಿಪಂ ಸಿಇಒ ಡಾ|ಸುಶೀಲಾ ಬಿ. ಮಾತನಾಡಿ, ಇಲಾಖೆಯ ವಿವಿಧ ಕಾರ್ಯಕ್ರಮಗಳ ಮುಖ್ಯಸ್ಥರು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗೆ ನಿಗದಿಪಡಿಸಿದ ಗುರಿಯನ್ನಷ್ಟೇ ಸಾಧಿಸಿರುವುದನ್ನು ಗಮನಿಸಿದ ಅವರು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಬೇಕು. ಅಲ್ಲದೇ, ಆದಷ್ಟು ನಾರ್ಮಲ್ ಹೆರಿಗೆ ಮಾಡಿಸಲು ಪ್ರಯತ್ನ ವಹಿಸಬೇಕು. ಅನಗತ್ಯವಾಗಿ ಸೀಸರಿಯನ್ ಮಾಡಿಸುವವರ ಬಗ್ಗೆ ಇಲಾಖಾಧಿಕಾರಿಗಳು ನಿಗಾ ವಹಿಸಬೇಕೆಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಜಗದೀಶ ನುಚ್ಚಿನ್ ಮಾತನಾಡಿ, ರೇಬಿಸ್ ಕಾಯಿಲೆ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ, ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ, ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ 224 ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಪೂರ್ವ ಮಾನ್ಯತೆ ರೋಗ ನಿರೋಧಕ ಲಸಿಕೆ ಈಗಾಗಲೇ ನೀಡಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಎಂ.ಗೊಜನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ., ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಅರುಂಧತಿ ಕೆ., ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸಹಾಯಕ ಔಷಧ ನಿಯಂತ್ರಕ ಸಂಗಣ್ಣ ಶಿಳ್ಳೆ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಗುರುರಾಜ ಮನಗೂಳಿ, ತಾಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.