ಪ್ಲಾಸ್ಟಿಕ್ ಮುಕ್ತ ಸಾಹಿತ್ಯ ಸಮ್ಮೇಳನಕ್ಕೆ ಚಿಂತನೆ
ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
Team Udayavani, Mar 29, 2022, 5:05 PM IST
ಹಾವೇರಿ: ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಒದಗಿ ಬಂದಿದ್ದು ವೈಶಿಷ್ಯಪೂರ್ಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಸಿಕೊಂಡು ಅರ್ಥಪೂರ್ಣ ಸಮ್ಮೇಳನ ಸಂಘಟಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆ, ಸಾಹಿತಿಗಳ ಅಭಿಪ್ರಾಯ ಆಲಿಸಿ ಅವರು ಮಾತನಾಡಿದರು.
86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20, 21 ಹಾಗೂ 22ರಂದು ಮೂರು ದಿನಗಳ ಕಾಲ ಹಾವೇರಿ ನಗರದಲ್ಲಿ ಆಯೋಜಿಸಲು ತಾತ್ಕಾಲಿಕವಾಗಿ ದಿನಾಂಕ ನಿರ್ಧರಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು.
ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ನಡೆಸಲು ಚಿಂತಿಸಲಾಗಿದೆ. ಸ್ವತ್ಛತೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿದಿನ ಸರಾಸರಿ ಒಂದುವರೆ ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಯಾವುದೇ ಗೊಂದಲ, ಒತ್ತಡಗಳು ಇಲ್ಲದಂತೆ ನೋಂದಣಿಗಾಗಿ 150ಕ್ಕೂ ಅಧಿಕ ಕೌಂಟರ್ ತೆಗೆಯುವುದು, ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು, ಸ್ವತ್ಛತೆ ಮತ್ತಿತರ ಕಾರ್ಯಗಳಿಗಾಗಿ ಎರಡು ಸಾವಿರಕ್ಕೂ ಅಧಿಕ ಜನ ಸ್ವಯಂ ಸೇವಕರನ್ನು ಬಳಸಿಕೊಳ್ಳುವುದು, ಹೆಚ್ಚಿನ ಶೌಚಾಲಯಗಳ ಅಳವಡಿಕೆ, ವಸತಿ ಸಮಸ್ಯೆ ನೀಗಿಸಲು ಹಾವೇರಿ ಒಳಗೊಂಡಂತೆ ವಿವಿಧ ತಾಲೂಕು, ದಾವಣಗೆರೆ ಹಾಗೂ ಹುಬ್ಬಳ್ಳಿ ನಗರಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಮೂಲ ಸೌಕರ್ಯಗಳ ಕೊರತೆ ಇರುವ ಜಿಲ್ಲೆಯಲ್ಲಿ 86ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸುವುದು ಒಂದು ಸವಾಲಿನ ಕೆಲಸವಾಗಿದೆ. ಇದನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಲಿದೆ. ಮುಖ್ಯವಾಗಿ ವಸತಿ ಸಮಸ್ಯೆ ಎದುರಾಗುತ್ತದೆ. ಈ ಕೊರತೆ ನೀಗಿಸಲು ಜಿಲ್ಲೆ ಸೇರಿದಂತೆ ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ವಸತಿ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.
ಸಮ್ಮೇಳನಕ್ಕೆ ಆಗಮಿಸುವವರಿಗೆ ಸಾರಿಗೆ ಸಂಪರ್ಕ ವ್ಯವಸ್ಥೆ ಮಾಡಲಿದ್ದೇವೆ. ಸಾಹಿತ್ಯ ಸಮ್ಮೇಳನ ಕೇವಲ ಜನಜಾತ್ರೆಯಾಗದೇ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಾದರಿ ಸಮ್ಮೇಳನವಾಗಿ ಆಯೋಜಿಸಲಾಗುವುದು. ಈ ಉದ್ದೇಶಕ್ಕಾಗಿ ಈಗಾಗಲೇ 17 ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳಲ್ಲಿ ಕೆಲ ಅಧಿಕಾರಿಗಳು ಬದಲಾಗಿದ್ದಾರೆ. ಹಾಗಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಅಧಿಕಾರೇತರ ಸದಸ್ಯರನ್ನು ಒಳಗೊಂಡಂತೆ ಸಮಿತಿಗಳನ್ನು ಶೀಘ್ರವೇ ಪುನರ್ ರಚಿಸಲಾಗುವುದು ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಸಮ್ಮೇಳನದ ಯಶಸ್ವಿಗೆ ನಗರಸಭೆ ವತಿಯಿಂದ ಎಲ್ಲ ನೆರವು ನೀಡಲಾಗುವುದು. ನಗರದ ಸ್ವತ್ಛತೆ, ಬೀದಿದೀಪ ಅಳವಡಿಕೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಸಾಹಿತಿಗಳು ಮಾತನಾಡಿ, ಸ್ಥಳೀಯ ಸಾಹಿತಿ ಮತ್ತು ಕಲಾವಿದರಿಗೆ ಅವಕಾಶ ಕಲ್ಪಿಸುವುದು, ಹೊಸ ಸಾಹಿತಿಗಳಿಗೆ, ಯುವ ಬರಹಗಾರರಿಗೆ, ಕಲಾವಿದರಿಗೆ ಅವಕಾಶ ಕಲ್ಪಿಸಬೇಕು. ಸ್ಥಳೀಯ ಸಂಘಟನೆಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಜವಾಬ್ದಾರಿಗಳನ್ನು ವಹಿಸಿಕೊಡಬೇಕು, ಸಮಾನಾಂತರ ವೇದಿಕೆ ಬದಲು ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯೋಜಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಒ ಮಹಮ್ಮದ ರೋಷನ್, ಅಪರ ಜಿಲ್ಲಾಕಾರಿ ಡಾ| ಎನ್.ತಿಪ್ಪೇಸ್ವಾಮಿ, ಎಎಸ್‌ಪಿ ವಿಜಯಕುಮಾರ ಸಂತೋಷ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಸಮ್ಮೇಳನದ ವಿವಿಧ ಉಪಸಮಿತಿಗಳ ಸದಸ್ಯ ಕಾರ್ಯದರ್ಶಿ ಅಧಿ ಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ವಂದಿಸಿದರು.
ಕೇವಲ ಸಾಹಿತಿಗಳ ಹಬ್ಬವಲ್ಲ, ಕನ್ನಡಿಗರ ಹಬ್ಬ: ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಸಾಹಿತಿಗಳ ಸಮ್ಮೇಳನವಲ್ಲ, ಕನ್ನಡ, ಕನ್ನಡಿಗ, ಕನ್ನಡ ಸಂಸ್ಕೃತಿ, ನಾಡು-ನುಡಿ ಎಲ್ಲವನ್ನು ಒಳಗೊಂಡ ಸಮ್ಮೇಳನವಾಗಿದೆ. ಅಖೀಲ ಭಾರತ ಸಾಹಿತ್ಯ ಸಮ್ಮೇಳವಾಗಿರುವುದರಿಂದ ರಾಜ್ಯದ ಹಾಗೂ ದೇಶದ ನಾನಾ ಭಾಗದಿಂದ, ಜಗತ್ತಿನ ನಾನಾ ರಾಷ್ಟ್ರದ ಕನ್ನಡಿಗರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮವಾಗಿದೆ. ಕೇವಲ ಸಾಹಿತಿಗಳ ಹಬ್ಬವಲ್ಲ, ಕನ್ನಡಿಗರ ಹಬ್ಬವಾಗಿದೆ. ಬನ್ನಿ ಹಾವೇರಿಗೆ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವಾಗಿ ಯಶಸ್ವಿಗೊಳಿಸೋಣ ಎಂದು ಮಹೇಶ ಜೋಶಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮತ್ತೂಂದು ಸಭೆ ಕರೆದು ಚರ್ಚಿಸಲಾಗುವುದು. ಎಲ್ಲ ಸಂಘ-ಸಂಸ್ಥೆಗಳಿಗೆ ಆಹ್ವಾನ ನೀಡಲಾಗುವುದು. ಸಮ್ಮೇಳನಕ್ಕೆ ಈಗಾಗಲೇ 20 ಕೋಟಿ ರೂ.ಅನುದಾನ ಘೋಷಿಸಲಾಗಿದೆ. ಇದು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಗಳನ್ನು ಸಂಘಟಿಸಲು ಮಾತ್ರ. ರಸ್ತೆ ದುರಸ್ತಿ, ಸ್ವತ್ಛತೆ ಸೇರಿದಂತೆ ಆಯಾ ಇಲಾಖಾ ಅಧಿಕಾರಿಗಳು ಕೇಂದ್ರ ಕಚೇರಿಯಿಂದ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಿಸಿಕೊಂಡು ಸಮ್ಮೇಳನ ನಡೆಯುವ ಒಳಗಾಗಿ ನಗರದ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು.
-ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.