ಫುಲೆ ಮಹಿಳಾ ಹಕ್ಕುಗಳ ಪ್ರತಿಪಾದಕಿ
Team Udayavani, Jan 9, 2018, 11:26 AM IST
ಕಲಬುರಗಿ: ದೇಶದ ಮೊದಲ ಮಹಿಳಾ ಶಿಕ್ಷಕಿ, ಸಾಮಾಜಿಕ ಕಾರ್ಯಕರ್ತೆ, ಕವಿತ್ರಿಯಾಗಿ ಭಾರತದ ಮಹಿಳೆಯರಿಗೆ
ಶಿಕ್ಷಣದ ಅವಕಾಶಗಳ ಅಡಿಪಾಯ ಹಾಕಿದ ಶ್ರೇಯಸ್ಸು ಮಾತೆ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಅವರೊಬ್ಬ ಮಹಿಳಾ ಹಕ್ಕುಗಳ ಪ್ರತಿಪಾದಕಿ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡದ ಹಿರಿಯ ಪ್ರಾಧ್ಯಾಪಕಿ ಡಾ| ಜಯಶ್ರೀ ದಂಡೆ ಹೇಳಿದರು.
ನಗರದ ಮಾನ್ಯವಾರ್ ದಾದಾಸಾಹೇಬ್ ಕಾರ್ನಿರಾಮ್ ಪದವಿ ಮಹಾವಿದ್ಯಾಲಯದಲ್ಲಿ ಅಕ್ಷರದ ಅವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 186ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಅವರು ಮಾತನಾಡಿದರು.
ಬ್ರಿಟಿಷರ ಆಳ್ವಿಕೆ ಅವಧಿಯಲ್ಲಿ ದೇಶದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದ ಪ್ರಥಮ ಮಹಿಳೆ ಸಾವಿತ್ರಿಬಾಯಿ ಫುಲೆ. ಅವರು ಅಸ್ಪೃಶ್ಯತೆ, ಸತಿಸಹಗಮನ ಪದ್ಧತಿ, ಬಾಲ್ಯವಿವಾಹ ಮುಂತಾದ ಅನಿಷ್ಠ ಸಂಪ್ರದಾಯಗಳು ಮತ್ತು ದುಷ್ಕೃತ್ಯಗಳ ವಿರುದ್ಧ ಧ್ವನಿ ಎತ್ತಿದ ಭಾರತೀಯ ಏಕೈಕ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಹೇಳಿದರು.
ಇಂದಿನ ವಿದ್ಯಾರ್ಥಿನಿಯರು ತಮ್ಮ ಅಮೂಲ್ಯವಾದ ಸಮಯವನ್ನು ಸಾಮಾಜಿಕ ಅಂತರ್ಜಾದಲ್ಲಿ ಕಳೆದುಕೊಳ್ಳುತ್ತಿದ್ದಾರೆ. ಥಳಕು ಬಳಕಿನ ಜೀವನಕ್ಕೆ ಮಾರು ಹೋಗಿ ತಾಂತ್ರಿಕ ಪ್ರಪಂಚದಲ್ಲಿ ತಲ್ಲೀನರಾಗಿ ಸುಂದರ ಬದುಕು ವ್ಯರ್ಥಮಾಡಿಕೊಳ್ಳುತ್ತಿದ್ದಾರೆ.
ವಿದ್ಯಾರ್ಥಿನಿಯರು ಸಾವಿತ್ರಿಬಾಯಿ ಫುಲೆ ಅವರನ್ನು ಮಾದರಿಯಾಗಿಟ್ಟುಕೊಂಡು ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಏನಾದರು ಸಾಧನೆ ಮಾಡುವುದಕ್ಕೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗುವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ| ವಿ.ಟಿ. ಕಾಂಬಳೆ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುವುದಕ್ಕೆ ಶಿಕ್ಷಕರ ಪಾತ್ರವು ಬಹಳ ಮುಖ್ಯವಾಗಿದೆ. ಹೀಗಾಗಿ ಶಿಕ್ಷಕರಾದವರು ವಿದ್ಯಾರ್ಥಿಗಳ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗಿದೆ. ಕಳೆದ ಹೋದ ಸಮಯ ಮತ್ತೆ ಮರುಕಳಿಸುವುದಿಲ್ಲ. ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ಕೊಟ್ಟು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಅಧ್ಯಕ್ಷೆ ಸುನೀತಾ ಕಾಂಬಳೆ, ಅಂಬರಾಯ, ರಾಜಕುಮಾರ ಎಂ. ದಣ್ಣೂರ, ವಿಶ್ವನಾಥ, ಚಂದ್ರಶೇಖರ ಹಾಗೂ ವಿದ್ಯಾರ್ಥಿಗಳು ಮತ್ತು ಇತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.