![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 7, 2019, 12:30 AM IST
ಮಡಿಕೇರಿ: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿಯಾಗಿದ್ದ ವ್ಯಾಪಾರಿ ಶಫೀಕ್ (40) ಅವರನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಈ ಸಂಬಂಧ ಅಸ್ಸಾಂ ಮೂಲದ ರಹೀಂ, ವಿರಾಜ ಪೇಟೆ ಸಮೀಪದ ಕೆದಮುಳ್ಳೂರು ಗ್ರಾಮದ ಮಾಳೇಟ್ಟಿರ ದರ್ಶನ್ ಹಾಗೂ ಜೀವನ್‌ನನ್ನು ಬಂಧಿಸಲಾಗಿದೆ. ಈ ಪೈಕಿ ಜೀವನ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಮೂರು ವರ್ಷಗಳ ಸೆರೆವಾಸ ಅನುಭವಿಸಿದ್ದ.
ಪ್ರಕರಣದ ವಿವರ
ಮಂಗಳವಾರ ರಾತ್ರಿ ಸುಮಾರು 10.45ರ ಹೊತ್ತಿಗೆ ಶಫೀಕ್ ಮನೆಗೆ ನುಗ್ಗಿದ್ದ ಆರೋಪಿಗಳು ಮಾತಿಗೆ ಮಾತು ಬೆಳೆಸಿ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ನಡೆಸಿದ್ದಾರೆ. ಮನೆಯೊಳಗೆ ಕಿರುಚಾಟ ಕೇಳಿ ಎಚ್ಚೆತ್ತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,ಧಾವಿಸಿ ಬಂದ ಪೊಲೀಸರು ಶಫೀಕ್ ಮನೆ ಯಲ್ಲೇ ಇದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಸ್ವಂತ ಅಂಗಡಿ ಹೊಂದಿದ್ದ ಶಫೀಕ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ.ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ವಿವಾ ದವೇ ಕೊಲೆಗೆ ಕಾರಣ ಹಾಗೂ ಕೊಲೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ತಿಳಿದು ಬಂದಿ ದೆ.ಶಫೀಕ್ ತಾಯಿ ಹಾಗೂ ಪತ್ನಿಯನ್ನು ಅಗಲಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆಗ್ರಹ
ಮೃತರ ಅಂತ್ಯಕ್ರಿಯೆಗೂ ಮೊದಲು ವಿರಾಜಪೇಟೆ ಶಾಫಿ ಜುಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಸಮಾಜದ ಮುಖಂಡರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು,ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ನಾಗಪ್ಪ ಅವರು, ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಷ್ಟು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸುಮಾರು ಎರಡು ಸಾವಿರ ಮಂದಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
You seem to have an Ad Blocker on.
To continue reading, please turn it off or whitelist Udayavani.