![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 24, 2021, 3:44 PM IST
ರಾಯಚೂರು: ಉದ್ದೇಶಿತ ಯೋಜನೆಗಳು ಅನುಷ್ಠಾನಗೊಳ್ಳದಿರಲು ಕೊರೊನಾ ನೆಪ ಹೇಳುವುದು ಸಮಂಜಸವಲ್ಲ ಎಂದು ನೀತಿ ಆಯೋಗದ ಜಂಟಿ ನಿರ್ದೇಶಕ ಸುಭೋದ್ ಯಾದವ್ ಸೂಚನೆ ನೀಡಿದರು.
ನಗರದ ಕೃಷಿ ವಿಜ್ಞಾನಗಳ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾದಗಿರಿ-ರಾಯಚೂರು ಹಿಂದುಳಿದ ಜಿಲ್ಲೆಗಳಾಗಿರುವುದರಿಂದ ಕೇಂದ್ರ ಸರ್ಕಾರ ಈ ಎರಡೂ ಜಿಲ್ಲೆಗಳನ್ನು ಮಹತ್ವಾಕಾಂಕ್ಷಿ ಯೋಜನೆಗೊಳಪಡಿಸಿದ್ದು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಆರೋಗ್ಯ ಕರ್ನಾಟಕ ಯೋಜನೆಯಡಿ ಬಡವರಿಗೆ ಅನುಕೂಲ ಮಾಡಿಕೊಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಡುದಾರರಿಗೆ ಸರಿಯಾದ ಸೌಲಭ್ಯ ಲಭಿಸುವಂತೆ ಗಮನ ಹರಿಸಬೇಕು. ಔಷಧಗಳನ್ನು ಎಲ್ಲ ರೋಗಿಗಳಿಗೆ ವಿತರಣೆಯಾಗಬೇಕು. ತಾರತಮ್ಯ ಮಾಡಿದರೆ ಇಲಾಖೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೇಂದ್ರ- ರಾಜ್ಯ ಸರ್ಕಾರಗಳ ಪ್ರತಿ ಯೋಜನೆಯನ್ನು ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನಕ್ಕೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ ಎಂದರು.
ಆಯುಷ್ಮಾನ್ ಕಾರ್ಡ್ ನೋಂದಣಿ ಪ್ರಕ್ರಿಯೆಯಲ್ಲಿ ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಶೇ.10 ಈ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮೀಣ ಪ್ರದೇಶದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೆ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತರಬೇಕೆಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ|ಅವಿನಾಶ ರಾಜೇಂದ್ರ ಮೆನನ್ ಮಾತನಾಡಿ, ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಯಡಿ ಲಾಭ ಪಡೆಯಲು ಇರುವ ತಾಂತ್ರಿಕ ಹಾಗೂ ಇತರೆ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಶೇಖ್ ತನ್ವೀರ್ ಅಸೀಫ್, ಜಿಪಂ ಯೋಜನಾ ಅಧಿಕಾರಿ ಮಡೋಳಪ್ಪ ಪಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗರಾಜ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಸುರೇಂದ್ರ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕ ನಹೀಂ ಹುಸೇನ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಇದ್ದರು.
You seem to have an Ad Blocker on.
To continue reading, please turn it off or whitelist Udayavani.