ಪ್ರವಾಸೋದ್ಯಮ- ಕೈಗಾರಿಕೆ ಅಭಿವೃದ್ಧಿಗೆ ಉತ್ತೇಜನ
ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭರವಸೆ
Team Udayavani, Jun 16, 2020, 1:59 PM IST
ಶಿವಮೊಗ್ಗ: ಏರ್‌ಪೋರ್ಟ್ ಕಾಮಗಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಶಿವಮೊಗ್ಗ: ಜಿಲ್ಲೆಯ ಜನತೆಯ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ತಿಳಿಸಿದರು.
ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಆನ್‌ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ನಿಗದಿತ ಸಮಯದ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರೂ ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ವೇಗ ದೊರೆತಿದೆ. ಶಿವಮೊಗ್ಗ- ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನೂತನ ವಿಭಾಗ ಕಚೇರಿ ಆರಂಭಿಸಿರುವುದರಿಂದ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ ಜಿಲ್ಲೆಯ ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಶಿವಮೊಗ್ಗದಲ್ಲಿ ಮುಖ್ಯ ಇಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಇನ್ನಷ್ಟು ವೇಗ ದೊರೆಯಲಿದೆ. ಗುಣಮಟ್ಟದ ಕೆಲಸ ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಇತರರು ಇದ್ದರು. ಶಿವಮೊಗ್ಗದಲ್ಲಿ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ವಿಮಾನ ನಿಲ್ದಾಣದಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆ ಆರಂಭವಾಗುವ ನಿರೀಕ್ಷೆಯಿದೆ. ಈ ಮೂಲಕ ಯುವ ಜನಾಂಗಕ್ಕೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಳೆದ ಒಂದು ವರ್ಷ ಅವ ಧಿಯಲ್ಲಿ ಹಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಇಂದು ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ
ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಪ್ರಸನ್ನ ಕುಮಾರ್ ಮಾತನಾಡಿದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಸ್ವಾಗತಿಸಿದರು.
ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಮೇಯರ್
ಸುವರ್ಣಾ ಶಂಕರ್ ಮತ್ತಿತರರು ಇದ್ದರು.
ಕುರ್ಚಿ ಸಿಗದೆ ಸಿಟ್ಟಾದ ಶಾಸಕರು
ವಿಮಾನ ನಿಲ್ದಾಣ ಕಾಮಗಾರಿ ಶಂಕುಸ್ಥಾಪನೆ ವೇಳೆ, ಶಾಸಕರೊಬ್ಬರಿಗೆ ವೇದಿಕೆ ಮೇಲೆ ಚೇರ್ ಸಿಗದೆ ಸಿಟ್ಟಾದ ಘಟನೆ ನಡೆಯಿತು. ವೇದಿಕೆಯಿಂದಲೇ ಕೆಳಗಿಳಿಯಲು ಹೊರಟವರನ್ನು ಸಚಿವರು, ಸಂಸದರು ಸಮಾಧಾನಪಡಿಸಿದರು. ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಅವರಿಗೆ ಚೇರ್ ವ್ಯವಸ್ಥೆ ಮಾಡಿರಿಲಿಲ್ಲ. ವೇದಿಕೆ ಹತ್ತಿದ್ದ ಅವರು ಚೇರ್ ಸಿಗದೆ ಸಿಟ್ಟಾದರು. ತಾವು ಕೆಳಗಿಳಿಯುವುದಾಗಿ ಹೇಳಿ ಹೊರಟರು. ಆಗ ಸಮಾಧಾನಪಡಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸೀಟ್ ವ್ಯವಸ್ಥೆ ಮಾಡಿದರು. ಶಾಸಕರಾದ ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ಅವರು ಕಾರ್ಯಕ್ರಮಕ್ಕೆ ತಡವಾಗಿ ಬಂದರು. ಅವರಿಗೂ ಸೀಟ್ ವ್ಯವಸ್ಥೆ ಮಾಡುವುದು ಕಷ್ಟವಾಯಿತು. ಆರಗ ಜ್ಞಾನೇಂದ್ರ ಅವರು ವೇದಿಕೆಯ ಮೂಲೆಯಲ್ಲಿ ಕುಳಿತರು. ಕುಮಾರ್ ಬಂಗಾರಪ್ಪ ಮತ್ತು ಹರತಾಳು ಹಾಲಪ್ಪ ಅವರಿಗೆ ವೇದಿಕೆ ಮಧ್ಯ ಭಾಗದಲ್ಲಿ ಚೇರ್ ವ್ಯವಸ್ಥೆ ಆಯಿತು. ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಅವರಿಗೆ ವೇದಿಕೆ ಮೇಲೆ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ಪ್ರೊಟೊಕಾಲ್ ಪ್ರಕಾರ ಅವರು ವೇದಿಕೆ ಮೇಲೆ ಕೂರುವಂತಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿ ಗಳು, ಅ ಧಿಕಾರಿಗಳು ಮಾತ್ರ ವೇದಿಕೆ ಮೇಲಿರಬೇಕು ಎಂಬ ನಿಯಮವಿದೆ. ಆದರೆ ಇದನ್ನು ವಿರೋಧಿ ಸಿ ಅವರಿಗೆ ಸೀಟ್ ವ್ಯವಸ್ಥೆ ಮಾಡಿದ್ದು ಪ್ರಶ್ನಾರ್ಹವಾಗಿದೆ. ಇದರಿಂದಾಗಿ ಶಾಸಕರೊಬ್ಬರಿಗೆ ಚೇರ್ ಸಿಗದಂತಾಗಿ ಮುಜುಗರಕ್ಕೀಡಾದರು.
ಕಾಮಗಾರಿ ವಿವರ
ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರಥಮ ಹಂತದಲ್ಲಿ ರನ್ ವೇ, ಟ್ಯಾಕ್ಸಿ ವೇ, ಏಪ್ರಾನ್, ಅಪ್ರೋಚ್ ರಸ್ತೆ, ಪೆರಿಫೆರಲ್ ರಸ್ತೆ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕೈಗೊಳ್ಳಲಾಗಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟವರ್, ಫೈರ್ ಸ್ಟೇಷನ್ ಕಟ್ಟಡ ಇತ್ಯಾದಿ ಕೈಗೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.