Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ
Team Udayavani, May 22, 2024, 6:50 AM IST
ಉಡುಪಿ: ಜಿಲ್ಲಾದ್ಯಂತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಹವಾಮಾನ ವೈಪರಿತ್ಯದಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೆಲವು ಪ್ರವಾಸೋದ್ಯಮ ಚಟುವಟಿಕೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧಿಸಿದೆ.
ಲೋಕಸಭೆ ಚುನಾವಣೆ ನಡುವೆಯೂ ಮೇ ಮತ್ತು ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ತಾಣಗಳಿಗೆ ಭೇಟೆ ನೀಡಿದ್ದಾರೆ. ಎರಡು ತಿಂಗಳಲ್ಲಿ ಬೀಚ್, ದೇವಸ್ಥಾನ ಹಾಗೂ ವಿವಿಧ ಪ್ರವಾಸಿತಾಣಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಅದರಲ್ಲೂ ವಿಶೇಷವಾಗಿ ಬೇಸಗೆ ಹಿನ್ನೆಲೆಯಲ್ಲಿ ವಾಟರ್ ಸ್ಪೋರ್ಟ್ಸ್ ಇರುವ ಜಾಗಗಳಿಗೆ ಹೆಚ್ಚೆಚ್ಚು ಮಂದಿ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ವಾಟರ್ ಸ್ಪೋರ್ಟ್ಸ್ ನಿರ್ಬಂಧ
ಜಿಲ್ಲೆಯ ಗುಡುಗು ಸಿಡಿಲು ಸಹಿತ ಗಾಳಿ ಮಳೆಯ ವಾತಾವರಣ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಜಿಲ್ಲಾಡಳಿತದಿಂದ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆಯಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೂ ನಿರ್ಬಂಧ ಹೇರಲಾಗಿದೆ.
ಗಾಳಿ ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ವಾಟರ್ ನ್ಪೋರ್ಟ್ಸ್ ಚಟುವಟಿಕೆಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಹವಾಮಾನ ತಿಳಿಯಾದಂತೆ ಪುನರ್ ಆರಂಭಿಸಲು ಅವಕಾಶ ನೀಡುವ ಸಾಧ್ಯತೆಯಿದೆ. ಒಂದೊಮ್ಮೆ ಮುಂಗಾರು ನಿರೀಕ್ಷೆಗೂ ಮೊದಲೇ ಪ್ರವೇಶ ಮಾಡಿದರೆ ಸದ್ಯಕ್ಕೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆಯಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು. ತಿಳಿಸಿದ್ದಾರೆ.
ಬಿಸಿಲಿದ್ದರೂ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲ
ಜಿಲ್ಲೆಯಲ್ಲಿ ಈ ಬಾರಿ ಬೇಸಗೆಯ ತೀವ್ರತೆ ಹೆಚ್ಚಿತ್ತು. ಆದರೂ ಪ್ರವಾಸೋದ್ಯಮ ಸ್ಥಳಗಳ ಮೇಲೆ ಇದು ಯಾವುದೇ ಪರಿಣಾಮ ಬೀರಿಲ್ಲ. ಕಾರಣ, ಕಳೆದ ಬಾರಿ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಪ್ರವಾಸಿಗರ ಸಂಖ್ಯೆಗಿಂತ ಈ ಬಾರಿ ಬೇಸಗೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆಹೆಚ್ಚಿದೆ. ದೇವಸ್ಥಾನ, ಬೀಚ್ ಹಾಗೂ ವಾಟರ್ ಸ್ಪೋರ್ಟ್ಸ್ ತಾಣಗಳಿಗೆ ಭೇಟಿ ನೀಡಿರುವವರ ಸಂಖ್ಯೆ ಹೆಚ್ಚಿದೆ ಎಂದು ಕುಮಾರ್ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.