![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 2, 2024, 10:58 AM IST
ಮಂಗಳೂರು: ಬೇಸಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಬೇಸಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಶನಿವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್. ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್. ಮತ್ತು ಎಸ್ಇಝಡ್ ನಂತಹ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು ಎಂದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3 ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಸಿಎಲ್ ಮತ್ತಿತರರು ಇದ್ದರು.
ಇದನ್ನೂ ಓದಿ: Azam Cheema: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ಪಾಕ್‌ನಲ್ಲಿ ಮೃತ್ಯು… ಮೂಲಗಳು
You seem to have an Ad Blocker on.
To continue reading, please turn it off or whitelist Udayavani.