ಈಗಲೂ ನಡೆಯುತ್ತಿದೆ ಬಾಲ್ಯವಿವಾಹ: ಡಿಸಿಯಿಂದ ಕಠಿನ ಕ್ರಮದ ಎಚ್ಚರಿಕೆ !
Team Udayavani, Sep 8, 2020, 6:00 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಈಗಲೂ ಬಾಲ್ಯವಿವಾಹ ಕಂಡುಬರುತ್ತಿದೆ. ನಿಗದಿತ ಪ್ರಾಯಕ್ಕೆ ಮೊದಲು ಮಕ್ಕಳ ವಿವಾಹ ನಡೆಸಿದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಹೆತ್ತವರಷ್ಟೇ ತಪ್ಪಿತಸ್ಥರಲ್ಲ
ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ, ಮಕ್ಕಳ ಪಾಲಕರು, ಮದುವೆ ಹಾಲ್ ಅಥವಾ ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್ ಪ್ರಸ್, ಧಾರ್ಮಿಕ ವಿಧಿಗಳನ್ನು ನೆರವೇರಿಸಿದ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಬಾರದು. ಇಂತಹ ಮಾಹಿತಿ ಬಂದರೆ ಕೂಡಲೇ ಅದನ್ನು ತಡೆಗಟ್ಟಬೇಕು ಎಂದರು.
ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಮಾಹಿತಿ ಗಮನಕ್ಕೆ ಬಂದಿದೆ. ಆದುದ ರಿಂದ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆ ಯರಿಂದ ಆಯಾ ವ್ಯಾಪ್ತಿಯಲ್ಲಿ ಮಾಹಿತಿ ಪಡೆದುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕೇಸು ದಾಖಲಿಸಬೇಕು ಎಂದು ತಿಳಿಸಿದರು.
ಪಿಂಚಣಿ ವಂಚಿತರಾಗಕೂಡದು
ಜಿಲ್ಲೆಯಲ್ಲಿ ವಿಧವೆಯರು ಪಿಂಚಣಿ ವಂಚಿತರಾಗ ಬಾರದು. ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರತೀ ಅಂಗನವಾಡಿ ಕಾರ್ಯಕರ್ತೆಯಿಂದ ಮಾಹಿತಿ ಪಡೆದು ಕೂಡಲೇ ವರದಿ ನೀಡಬೇಕು. ಸರಕಾರ ಪೂರೈಸಿದ ಸ್ಯಾನಿಟರಿ ಪ್ಯಾಡ್‌ಗಳನ್ನು ಎಲ್ಲ ಶಾಲಾ ಹೆಣ್ಣು ಮಕ್ಕಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿತರಿಸಿ ವರದಿ ಒಪ್ಪಿಸಬೇಕು. ಬಳಸಿ ಎಸೆಯಲು ತ್ಯಾಜ್ಯ ಸಂಗ್ರಹಣಾ ತೊಟ್ಟಿ ಮತ್ತು ಸುಡುವಿಕೆ ಯಂತ್ರ ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು. ಹೆಣ್ಣು ಮಕ್ಕಳು ಶಾಲೆಗೆ ಗೈರಾಗುವುದನ್ನು ತಪ್ಪಿಸಲು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯ ಕ್ರಮಗಳನ್ನು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಮಕ್ಕಳನ್ನು ದತ್ತು ಪಡೆದು
ಕೊಳ್ಳುವ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜಾ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ
2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ 34 ವಿದ್ಯಾರ್ಥಿನಿಯರಿಗೆ ತಲಾ 5,000ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಶೇ. 100 ಫಲಿತಾಂಶ ದಾಖಲಿಸಿದ ಎಲ್ಲ ವಿದ್ಯಾರ್ಥಿನಿಯರು ಪಿಯುಸಿ ವಿದ್ಯಾಭ್ಯಾಸ ಮುಂದುವರಿಸಿರುವ 34 ಪ್ರೌಢಶಾಲೆಗಳಿಗೆ 5,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಗರಿಷ್ಠ ಹೆಣ್ಣು ಮಕ್ಕಳು ಜನಿಸಿದ ಜಿಲ್ಲೆಯ 5 ಗ್ರಾ.ಪಂ.ಗಳಿಗೆ ತಲಾ 5,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಮಹಿಳಾ ಶಕ್ತಿ ಕೇಂದ್ರದ ಮೂಲಕ ಗೊಂಚಲು ಕಾರ್ಯಕ್ರಮ ಹಾಗೂ ಇನ್ನಿತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.