ಮಳೆಗಾಲದಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ
Team Udayavani, Jun 8, 2020, 5:56 AM IST
ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸ ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾಧ್ಯತೆೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಿ. ಅಗತ್ಯ ಇರುವೆಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್‌ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಅವರು ಸೂಚಿಸಿದರು.
ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಿ, ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ನಗರಸಭೆಯ ರಸ್ತೆಗಳ ಬಳಿ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತಗಳಾಗುವುದನ್ನು ತಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಂಚಾರಿ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚರಿಸುವವರ ವಿರುದ್ಧª ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಂತೆಕಟ್ಟೆಯ ಮಾರುಕಟ್ಟೆಯನ್ನು ಒಂದು ವಾರದ ಒಳಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿ ಕಾರಿಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.