ಜೆಡಿಎಸ್‌ಗೆ ಪಾಲುದಾರಿಕೆ ತಪ್ಪಿಸಲು ಸಿದ್ದು ತಂತ್ರ
Team Udayavani, Nov 18, 2019, 3:09 AM IST
ಬೆಂಗಳೂರು: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬ ಮಾತು ಜನಜನಿತ. ಅಲ್ಲದೇ ಶತ್ರುವಿನ ಶತ್ರು ಮಿತ್ರ ಎಂಬ ಗಾದೆಯೂ ಇದೆ. ಆದರೆ, ಪ್ರಸಕ್ತ ರಾಜ್ಯ ರಾಜಕೀಯದಲ್ಲಿ ಶತ್ರುವಿಗಿಂತ ಶತ್ರುವಿನ ಮಿತ್ರ ಶತ್ರು ಎಂಬ ಹೊಸ ಲೆಕ್ಕಾಚಾರದ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿಯ ಲೆಕ್ಕಾಚಾರ ಹಾಕಿಕೊಂಡಿದ್ದಾರೆಂಬ ಮಾತುಗಳು ಕಾಂಗ್ರೆಸ್‌ನಲ್ಲಿನ ಅವರ ವಿರೋಧಿ ಬಣ ಪ್ರಚಾರದಲ್ಲಿ ತೊಡಗಿದೆ.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಬಹುತೇಕ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿ ಯಾಗಿದ್ದು, ಕನಿಷ್ಠ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಗೆಲ್ಲುತ್ತಾರೆಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿನ ಸಿದ್ದರಾಮಯ್ಯ ವಿರೋಧಿ ಬಣದವರ ಪ್ರಕಾರ ಸಿದ್ದರಾಮಯ್ಯ ಲೆಕ್ಕಾಚಾರವೇ ಬೇರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಿನ ಮೂರು ವರ್ಷ ಅಧಿಕಾರದಲ್ಲಿ ಮುಂದುವರಿದರೆ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಅವಕಾಶ ಬರಬಹುದು ಮತ್ತು ತಾವೂ ಪಕ್ಷದಲ್ಲಿ ಗಟ್ಟಿಯಾಗಬಹುದು ಎಂಬ ಯೋಚನೆಯಲ್ಲಿರ ಬಹುದು ಎಂಬುದು ವಿರೋಧ ಬಣದವರ ಮಾತು.
ಈ ಉಪ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಅದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯೂ ಆಗಿದೆ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತಕ್ಕೆ ಅಗತ್ಯವಿರುಷ್ಟು ಸಂಖ್ಯೆಯ ಶಾಸಕರು ಗೆಲ್ಲಿಸಿಕೊಂಡು ಬರಲಾಗದಿದ್ದರೆ, ಅವರ ಸರ್ಕಾರ ಪತನವಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಹಿರಂಗವಾಗಿ ಹೇಳಿರುವುದು ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿದೆ ಎಂದು ಹೇಳಲಾಗುತ್ತಿದೆ.
ಅದೇ ಕಾರಣಕ್ಕೆ ಈ ಉಪ ಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಾಚಾರ ಯಶಸ್ವಿಯಾಗದಂತೆ ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸಿದ್ದಾರೆಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಕೊಡೆಸಿದ್ದಾರೆ. ಕೆ.ಆರ್.ಪುರದಲ್ಲಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಹೊಸಕೋಟೆಯಲ್ಲಿ ಹೆಬ್ಟಾಳ ಶಾಸಕ ಬೈರತಿ ಸುರೇಶ್ ಅವರ ಪತ್ನಿ ಪದ್ಮಾವತಿ ಸುರೇಶ್,
ಮಹಾಲಕ್ಷ್ಮೀ ಲೇಔಟ್‌ನಲ್ಲಿ ಶಿವರಾಜ್, ಹೊಸಪೇಟೆಯಲ್ಲಿ ವಿ.ವೈ. ಘೋರ್ಪಡೆ, ಹುಣಸೂರಿ ನಲ್ಲಿ ಎಚ್.ಪಿ. ಮಂಜುನಾಥ್, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದು, ಅವರಲ್ಲಿ ಬಹುತೇಕರು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಿಂತ ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಅನುಕೂಲವಾಗುವಂತೆ ನೋಡಿಕೊಂಡಿ ದ್ದಾರೆ ಎನ್ನಲಾಗುತ್ತಿದೆ.
ಜೆಡಿಎಸ್ ದೂರ ಇಡುವ ಯತ್ನ: ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯದಿದ್ದರೆ, ಜೆಡಿಎಸ್ ಮತ್ತೆ ಸಕ್ರಿಯವಾಗುವುದರಿಂದ ಸರ್ಕಾರದಲ್ಲಿ ಪಾಲುದಾರಿಕೆ ಪಡೆಯುವ ಸಾಧ್ಯತೆಯಿದೆ. ಆ ಮೂಲಕ ಜೆಡಿಎಸ್ ಸರ್ಕಾರದ ಭಾಗವಾದರೆ ಹಳೇ ಮೈಸೂರು ಭಾಗದಲ್ಲಿ ಮತ್ತಷ್ಟು ಬಲಗೊಳ್ಳಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಒಂದು ವೇಳೆ, ಜೆಡಿಎಸ್‌ನ್ನು ಸೇರಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕಿದರೂ ಯಡಿಯೂರಪ್ಪ ಅವರ ಬಗ್ಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಮೃದು ಧೋರಣೆ ಅನುಸರಿಸುತ್ತಿದ್ದು, ಅವರಿಗೆ ಬಾಹ್ಯ ಬೆಂಬಲ ನೀಡುವ ಮೂಲಕವೂ ಸರ್ಕಾರದಲ್ಲಿ ತಮ್ಮ ಹಿಡಿತ ಸಾಧಿಸುವ ಯತ್ನ ನಡೆಸುವ ಸಾಧ್ಯತೆಯಿದೆ.
ಇದಲ್ಲದೇ ಕಾಂಗ್ರೆಸ್‌ನ ಒಂದು ಗುಂಪು ಈಗಲೂ ಜೆಡಿಎಸ್ ನಾಯಕರ ಜತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಈಗಲೂ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಎರಡೂ ಪಕ್ಷಗಳ ನಡುವೆ ಆಂತರಿಕ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.
ಆದರೆ, ಸಿದ್ದರಾಮಯ್ಯ ಜೆಡಿಎಸ್ ಜತೆಗೆ ಯಾವುದೇ ರೀತಿಯ ಸಂಬಂಧ ಬೇಡವೆಂದು ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಕಾಂಗ್ರೆಸ್ ನಾಯಕರ ಆಂತರಿಕ ಮೈತ್ರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ ಎನ್ನಲಾಗುತ್ತಿದೆ. ಆದರೆ, ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಸಿದ್ದರಾಮಯ್ಯ ವಿರೋಧಿ ಬಣದ ಕಾಂಗ್ರೆಸ್ ನಾಯಕರು ಜೆಡಿಎಸ್ ಜತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.