7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ; ಕಾರ್ಯಪಡೆ ರಚನೆ
Team Udayavani, Jul 20, 2022, 7:26 PM IST
ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯ ಅಡಿಯಲ್ಲಿ ಹಾಸನ, ಹಾವೇರಿ, ಕೆ.ಆರ್. ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್ ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. ಕಾಲೇಜನ್ನು ಕೆಐಟಿ ಆಗಿ ಉನ್ನತೀಕರಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಡಗೋಪನ್ ಅವರು ಬೆಂಗಳೂರಿನ ಐಐಐಟಿಯ ಸ್ಥಾಪಕ ನಿರ್ದೇಶಕರು. ಈ ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಬೇಡಿಕೆ ಮತ್ತು ಉದ್ಯೋಗಾವಕಾಶ ಇರುವ ತಲಾ 2 ವಿಭಾಗಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ ಆಗಿ ಬೆಳೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಸಂಶೋಧನೆ, ನಾವೀನ್ಯತೆ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಉತ್ತೇಜನ ನೀಡುತ್ತಿದೆ. ಇದಕ್ಕಾಗಿ ವಿದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವ ಒಡಂಬಡಿಕೆಗಳನ್ನು ಈ ಕಾಲೇಜುಗಳು ಮಾಡಿಕೊಳ್ಳಲಿವೆ. ಈ ಮೂಲಕ ಇವುಗಳನ್ನು ಅಂತಾರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಈ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 95 ಕೋಟಿ ರೂ. ಅಗತ್ಯವಿದ್ದು, ಈಗಾಗಲೇ 21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರ್ಯಪಡೆಯು ಈ ಕಾಲೇಜುಗಳ ಉನ್ನತೀಕರಣಕ್ಕೆ ಎರಡು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ ಸಲ್ಲಿಸಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಈ ಕಾಲೇಜುಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಚಟುವಟಿಕೆಗಳನ್ನು ಸೂಚಿಸಲಿದೆ ಎಂದು ಸಚಿವರು ನುಡಿದಿದ್ದಾರೆ.
ಪರಿಣತರಾದ ಪ್ರೊ.ಎಲ್ ಎಸ್ ಗಣೇಶ್, ಪ್ರೊ.ಸಿ ರಾಜೇಂದ್ರ, ಪ್ರೊ. ರಾಮಗೋಪಾಲ್ ರಾವ್, ಪ್ರೊ. ಚಕ್ರವರ್ತಿ, ಪ್ರೊ.ಮಣೀಂದ್ರ ಅಗರವಾಲ್ ಮತ್ತು ಪ್ರೊ. ವೈ ನರಹರಿ ಅವರು ಈ ಕಾರ್ಯಪಡೆಯ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.