Nandini ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು; ಅಮುಲ್ ವಿರುದ್ಧ HDK ಆಕ್ರೋಶ
KMF ನಿಷ್ಕ್ರಿಯತೆ ಬಗ್ಗೆಯೂ ಕಿಡಿ; ನಂದಿನಿ ವಿರುದ್ಧ 3ನೇ ಸಂಚು ಎಂದ ಮಾಜಿ ಸಿಎಂ
Team Udayavani, Apr 8, 2023, 2:40 PM IST
ಬೆಂಗಳೂರು: ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಋಣಿಯಾಗಿರಬೇಕಾದ ಅಮುಲ್, ಕೆಎಂಎಫ್ ಗೆ ಅನಾರೋಗ್ಯಕರ ಪೈಪೋಟಿ ಸಹಕಾರ ಒಡ್ಡುವ ಮೂಲಕ ಸಹಕಾರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು ನಡೆದಿದೆ. ಅಮುಲ್ ಜತೆ ನಂದಿನಿ ವಿಲೀನ ಮಾಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಮೊದಲ ಸಂಚು, ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚುಗಳು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.
ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ʼ ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ʼನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್ʼನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ. ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಇಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ.
ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಹೆಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಹೆಚ್.ಡಿ.ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್ʼಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ ಎಂದು ಮಾಹಿತಿ ನೀಡಿರುವ ಅವರು, ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ʼಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು. ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.