ದೇವೇಗೌಡ, ಸಿಎಂ ತೀರ್ಮಾನವೇ ಅಂತಿಮ
Team Udayavani, Jul 8, 2019, 3:04 AM IST
ಬೆಂಗಳೂರು: ಪ್ರಸಕ್ತ ರಾಜಕೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿರ್ಣಯ ಕೈಗೊಂಡಿದೆ.
ಜತೆಗೆ, ಸಮ್ಮಿಶ್ರ ಸರ್ಕಾರ ಮುಂದುವರಿಯುವುದಾದರೆ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ನಾಯಕತ್ವ ಬದಲಾವಣೆಗೆ ಒಪ್ಪಬಾರದು. ಅನಿವಾರ್ಯವಾದರೆ ಮಧ್ಯಂತರ ಚುನಾವಣೆಗೆ ಹೋಗೋಣ ಎಂದು ಕೆಲವು ಶಾಸಕರು ಸಭೆಯಲ್ಲಿ ಆಗ್ರಹಿಸಿದರು.
ಸರ್ಕಾರ ಉಳಿಸಿಕೊಳ್ಳಲು ಅಗತ್ಯವಾದರೆ ನಾವೆಲ್ಲ ಸ್ಥಾನ ಬಿಟ್ಟು ಕೊಡಲು ಸಿದ್ಧ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದರು ಎಂದು ಮೂಲಗಳು ತಿಳಿಸಿವೆ.
ಸಂಕಷ್ಟದ ಸಮಯದಲ್ಲಿ ಶಾಸಕರೆಲ್ಲರೂ ಒಟ್ಟಾಗಿ ಇರಿ. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಎಲ್ಲ ರೀತಿಯ ಪ್ರಯತ್ನ ಮಾಡಲಿದ್ದೇವೆ. ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಯಾರೂ ಬಹಿರಂಗವಾಗಿ ಮಾತನಾಡಬೇಡಿ ಎಂದು ದೇವೇಗೌಡರು ಕಿವಿಮಾತು ಹೇಳಿದರು.
ಎಚ್‌ಡಿಕೆ ಬೇಸರ: ಅಮೆರಿಕ ಪ್ರವಾಸ ಮೊಟಕುಗೊಳಿಸಿ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ಎಚ್.ವಿಶ್ವನಾಥ್, ನಾರಾಯಣಗೌಡ ಹಾಗೂ ಗೋಪಾಲಯ್ಯ ಅವರು ರಾಜೀನಾಮೆ ನೀಡಿದ ಬಗ್ಗೆ ಬೇಸರ ಹೊರ ಹಾಕಿದರು.
ಮೂವರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳಿಗೆ ಎಂದೂ ಅಡ್ಡಿಪಡಿಸಿಲ್ಲ. ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಂಡಿದ್ದೇನೆ. ನಮ್ಮವರು ಯಾರೂ ಎಲ್ಲೂ ಹೋಗುವುದಿಲ್ಲ ಎಂಬ ನಂಬಿಕೆಯಿಂದ ಇದ್ದೆ. ಆದರೆ, ನಂಬಿದವರೇ ಕೈ ಕೊಟ್ಟರು ಎಂದು ಬಾವುಕರಾದರು. ನೀವು ನನ್ನ ಜತೆಗಿರಿ. ಸರ್ಕಾರ ಉಳಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಸಭೆಗೆ ಹಾಜರು: “ಆಪರೇಷನ್ ಕಮಲ’ ಕಾರ್ಯಾಚರಣೆಗೆ ಒಳಗಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾದ ಶ್ರೀನಿವಾಸಗೌಡ, ಸಿರಾ ಸತ್ಯನಾರಾಯಣ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.