ಬಸ್ ದರ ಏರಿಸಲು ಸೂಕ್ತ ಕಾರಣ ಕೊಡಿ
Team Udayavani, Jun 25, 2019, 3:05 AM IST
ಬೆಂಗಳೂರು: ಬಸ್ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಡೀಸೆಲ್ ಬೆಲೆ ಹೆಚ್ಚಾಗಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಬಸ್ ದರ ಹೆಚ್ಚಿಸಿಲ್ಲ. ಹೀಗಾಗಿ, ಈಗ ಬಸ್ ದರ ಏರಿಕೆಗೆ ಅವಕಾಶ ಕೊಡಬೇಕೆಂಬ ಪ್ರಸ್ತಾವನೆಗೆ ಪ್ರತಿಕ್ರಿಯಿಸಿ, ಬಸ್ ದರ ಏರಿಕೆ ಕುರಿತು ಸಮರ್ಥನೆ ನೀಡಿ, ರಸ್ತೆ ಸಾರಿಗೆ ಸಂಸ್ಥೆಗಳು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಮಾಹಿತಿ ನೀಡಿ ಎಂದು ನಿರ್ದೇಶನ ನೀಡಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತಷ್ಟು ಜನಸ್ನೇಹಿಯಾಗಬೇಕು. ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಾಗೂ ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕಲ್ ಬಸ್‌ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಿ ಎಂದು ತಿಳಿಸಿದರು.
ಗಾರ್ಮೆಂಟ್ಸ್ ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್‌ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾರ್ಮಿಕರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ ಪಾಸ್ ಸಹ ನೀಡಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.
ಬಿಎಂಟಿಸಿಯನ್ನು ಸಂಪೂರ್ಣ ಡಿಜಿಟೈಸ್ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರೀಸ್ ತಿಳಿಸಿದರು. ಹೊಸಬಸ್ ಖರೀದಿ, ಹೊಸ ಬಸ್ ನಿಲ್ದಾಣ/ಡಿಪೋಗಳ ನಿರ್ಮಾಣ ಮೊದಲಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್ ಉಪಸ್ಥಿತರಿದ್ದರು.
ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟಕ್ಕೆ ಸಂಬಂಧಿಸಿದಂತೆ ರಚಿಸಲು ನಿರ್ಧರಿಸಿರುವ ಸಂಪುಟ ಉಪ ಸಮಿತಿಯಲ್ಲಿ ತಾವು ಬಯಸಿದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಎಚ್.ಕೆ. ಪಾಟೀಲ ಅವರನ್ನೂ ಸೇರಿಸಲಾಗುವುದು.
-ಎಚ್.ಡಿ. ಕುಮಾರಸ್ವಾಮಿ, ಸಿಎಂ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.