ಕರ್ನಾಟಕ ಹಾಫ್ ಸೆಂಚುರಿ ಸಿಹಿಸುದ್ದಿ ಉಂಟೂರೀ
Team Udayavani, May 24, 2019, 3:25 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟವನ್ನು ಮಣಿಸಿ, ಹದಿನೇಳು ಸ್ಥಾನದಲ್ಲಿದ್ದ ಸಂಖ್ಯಾಬಲವನ್ನು 24ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಕರ್ನಾಟಕವನ್ನು ಭದ್ರಕೋಟೆಯನ್ನಾಗಿಸಿಕೊಂಡಿದೆ. ಈ ಮೂಲಕ ರಾಜಕೀಯ ಬದಲಾವಣೆ ಉಂಟಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡರೆ, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಸಜ್ಜಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ 224ರಲ್ಲಿ 104 ಸ್ಥಾನ ಗೆದ್ದಿದ್ದ ಬಿಜೆಪಿ ಇದೀಗ ಲೋಕಸಭೆಯ 28 ಕ್ಷೇತ್ರದಲ್ಲಿ 25 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಪ್ರಾಬಲ್ಯ ಮೆರೆದಿದೆ. ಜತೆಗೆ ಎರಡು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಒಂದು ಕ್ಷೇತ್ರ ಗೆದ್ದು ಸಂಖ್ಯಾಬಲವನ್ನು ಬಿಜೆಪಿ 105ಕ್ಕೆ ಹೆಚ್ಚಿಸಿಕೊಂಡಿದೆ. ಪಕ್ಷದ ಗೆಲವು ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಆತ್ಮ ವಿಶ್ವಾಸ ಹೆಚ್ಚಿದೆ.
2014ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 28ರಲ್ಲಿ 17 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಅಕಾಲಿಕ ನಿಧನದಿಂದ ಬಿಜೆಪಿ ಬಲ 16ಕ್ಕೆ ಕುಸಿದಿತ್ತು. ವಿಧಾನಸಭೆಯಲ್ಲಿ ಶ್ರೀರಾಮುಲು ಸ್ಪರ್ಧಿಸಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗಪ್ಪ ಜಯ ಸಾಧಿಸಿದ್ದರು.
ಅಂತಿಮ ವಾಗಿ 15 ಸ್ಥಾನಗಳನ್ನು ಉಳಿಸಿಕೊಂಡಿದ್ದ ಬಿಜೆಪಿಗೆ 2019ರ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಗೆಲವು ಸಾಧಿಸುವ ಮೂಲಕ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡುಕೊಂಡಿದೆ. ಇದರಿಂದ ಕರ್ನಾಟಕದಲ್ಲಿ ಮೋದಿ ಅಲೆ, ಅಮಿತ್ ಶಾ ತಂತ್ರ ಗಾರಿಕೆ, ಯಡಿಯೂರಪ್ಪ ಅವರ ಸಂಘಟನಾ ಚಾತುರ್ಯ ಉತ್ತಮ ಕೆಲಸ ಮಾಡಿದೆ. ಸಂಘಟಿತ ಹೋರಾಟದಿಂದ ಮೈತ್ರಿ ಅಭ್ಯರ್ಥಿಗಳಿಗೆ ದೊಡ್ಡ ಪೆಟ್ಟು ನೀಡಿದ್ದಾರೆ. 25 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರಿಂದ ಮಂಡ್ಯ ಸೇರಿ ರಾಜ್ಯದ 26 ಕ್ಷೇತ್ರದಲ್ಲಿ ಬಿಜೆಪಿ ಸಂಭ್ರಮ ಮುಗಿಲು ಮುಟ್ಟಿದೆ.
ಉತ್ತರ ಕರ್ನಾಟಕದ 14 ಕ್ಷೇತ್ರದಲ್ಲಿ 14 ಕ್ಷೇತ್ರವನ್ನು ಬಿಜೆಪಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ದಕ್ಷಿಣ ಕರ್ನಾಟಕದ 14 ಕ್ಷೇತ್ರದಲ್ಲಿ 11ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ. ಹಾಸನ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೂ, ಎರಡನೇ ಸ್ಥಾನದಲ್ಲಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದ ನಾಲ್ಕು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಅನಂತ ಕುಮಾರ್ ಹೆಗಡೆ 6ನೇ ಬಾರಿಗೆ ಜಯ ಸಾಧಿಸಿದ್ದರೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಹಾಗೂ ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ಎರಡನೇ ಬಾರಿಗೆ ಜಯ ಸಾಧಿಸಿದ್ದಾರೆ.
ಬಿಜೆಪಿಯ ಜಿ.ಎಸ್.ಬಸವರಾಜ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಸೋಲಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಡಾ.ಉಮೇಶ್ ಯಾದವ್, ಖರ್ಗೆಯವರ ಗೆಲುವಿನ ನಾಗಾಲೋಟಕ್ಕೆ ತಡೆ ಹಾಕಿದ್ದಾರೆ. ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಯವರು ನಾಲ್ಕನೇ ಭಾರಿಯೂ ಜಯ ತಮ್ಮದಾಗಿಸಿಕೊಂಡಿದ್ದಾರೆ.
ಚಿಕ್ಕೋಡಿಯಲ್ಲಿ ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ಎದುರು ಅಣ್ಣಾಸಾಹೇಬ್ ಜೊಲ್ಲೆ ಜಯ ಸಾಧಿಸಿಕೊಂಡಿದ್ದಾರೆ. ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ ಮತ್ತೂಮ್ಮೆ ಜಯಭೇರಿ ಬಾರಿಸಿದ್ದಾರೆ. ಬಾಗಲಕೋಟೆಯಲ್ಲಿ ಗದ್ದಿಗೌಡರು ಗೆದ್ದರೆ, ವಿಜಯಪುರದಲ್ಲಿ ರಮೇಶ್ ಜಿಗಜಿಣಗಿ 6ನೇ ಬಾರಿಯೂ ಜಯ ಸಾಧಿಸಿದ್ದಾರೆ. ರಾಯಚೂರಿನಲ್ಲಿ ಹಾಲಿ ಸಂಸದ ಕಾಂಗ್ರೆಸ್‌ನ ಬಿ.ವಿ.ನಾಯಕ್ ವಿರುದ್ಧ ರಾಜ ಅಮರೇಶ್ ನಾಯಕ್ ಗೆದ್ದರೆ, ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಹಾಲಿ ಸಂಸದ ಭಗವಂತ ಖೂಬಾ ಮತ್ತೇ ಕಮಾಲ್ ಆಗಿದ್ದಾರೆ.
ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ, ಬಳ್ಳಾರಿಯಲ್ಲಿ ಹೊಸ ಮುಖ ವೈ.ದೇವೇಂದ್ರಪ್ಪ ಜಯ ಸಾಧಿಸಿದರೆ, ಶಿವಕುಮಾರ್ ಉದಾಸಿ ಹಾವೇರಿಯಿಂದ ಮೂರನೇ ಬಾರಿಗೆ ಸಂಸತ್‌ಗೆ ಆಯ್ಕೆಆಗಿದ್ದಾರೆ. ದಾವಣಗೆಯಿಂದ ಜಿ.ಎಂ.ಸಿದ್ದೇಶ್ವರ್ ನಾಲ್ಕನೇ ಬಾರಿಯೂ ಗೆಲುವು ತಮ್ಮದಾಗಿಸಿ ಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಹಾಲಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ಸೋಲಿಸುವಲ್ಲಿ ಎ.ನಾರಾಯಣ ಸ್ವಾಮಿ ಯಶಸ್ವಿಯಾಗಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರತಾಪ್ ಸಿಂಹ ಅದೃಷ್ಟ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಉತ್ತರದ ಮತದಾರರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. 28 ವರ್ಷದ ತೇಜಸ್ವಿ ಸೂರ್ಯ ಯುವ ಸಂಸದನಾಗಿ ಸಂಸತ್ ಪ್ರವೇಶ ಮಾಡಲಿದ್ದಾರೆ. ಬೆಂಗಳೂರು ಕೇಂದ್ರವನ್ನು ಮೂರನೇ ಬಾರಿಯೂ ಪಿ.ಸಿ.ಮೋಹನ್ ಬಿಟ್ಟುಕೊಟ್ಟಿಲ್ಲ. ಮೂರನೇ ಬಾರಿಗೂ ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ವಿರುದ್ಧ ಬಿ.ಎನ್.ಬಚ್ಚೇಗೌಡ ಅವರು ವಿಜಯ ಮಾಲೆ ಹಾಕಿಕೊಂಡಿದ್ದಾರೆ. ಕೋಲಾರದಲ್ಲಿ ಮಾಜಿ ಕೇಂದ್ರ ಸಚಿವ ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಗೆಲುವಿನ ನಾಗಾಲೋಟಕ್ಕೆ ಬಿಬಿಎಂಪಿ ಕಾರ್ಪೊàರೇಟರ್ ಆಗಿದ್ದ ಮುನಿಸ್ವಾಮಿ ಕಡಿವಾಣ ಹಾಕಿದ್ದಾರೆ. ಚಾಮರಾಜನಗರದಲ್ಲಿ ಹಾಲಿ ಸಂಸದ ಧ್ರುವನಾರಾಯಣ ಅವರ ವಿರುದ್ಧ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಜಯ ಸಾಧಿಸಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಜಯ ಸಾಧಿಸಿರುವುದು ಆ ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ.
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.