ಮಳೆ ಅಬ್ಬರಕ್ಕೆ ಜನ ತತ್ತರ; ಭಾರೀ ಹಾನಿ: ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜಿಗೆ ರಜೆ
Team Udayavani, Jul 7, 2022, 1:02 AM IST
ಬೆಂಗಳೂರು/ಕಾರವಾರ/ಚಿಕ್ಕಮಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಬುಧವಾರ ಮಧ್ಯಾಹ್ನದ ಅನಂತರ ಭಾರೀ ಮಳೆ ಸುರಿಯುತ್ತಿದೆ. ಗುರುವಾರ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದರಿಂದ ಜಿಲ್ಲಾಧಿಕಾರಿ ಮುಗಿಲನ್ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಕರಾವಳಿ, ಘಟ್ಟ, ಮಲೆನಾಡಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ ನದಿ ದಂಡೆಯ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಮಲೆನಾಡು: ಅಸ್ತವ್ಯಸ್ತ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಅಬ್ಬರಿಸಿದ ಮಳೆ ಕೊಂಚ ತಗ್ಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟದಲ್ಲೇ ಹರಿಯುತ್ತಿವೆ. ಕೊಪ್ಪ, ಮೂಡಿಗೆರೆ, ಶೃಂಗೇರಿ, ಕಳಸ ಚಿಕ್ಕಮಗಳೂರು ಸುತ್ತಮುತ್ತ ಬಿಟ್ಟು ಬಿಟ್ಟು ಮಳೆ ಆಗುತ್ತಿದ್ದು, ಕಡೂರು, ತರೀಕೆರೆ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಳೆಯಿಂದ ಕೆಲವೆಡೆ ಮನೆಗಳಿಗೆ ಹಾನಿಯಾಗಿದೆ. ರಸ್ತೆಗಳ ಮೇಲೆ ಗುಡ್ಡದ ಮಣ್ಣು ಬಿದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶೋಧ ಕಾರ್ಯ
ಶಾಲೆಯಿಂದ ಮನೆಗೆ ಬರುತ್ತಿದ್ದ ಹೊಸಪೇಟೆಯ ಬಾಲಕಿ ಸುಪ್ರೀತ್ ಸೋಮವಾರ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಎಲ್ಲೂ ಪತ್ತೆಯಾಗಿಲ್ಲ. ಬಾಲಕಿಯ ಪತ್ತೆಗಾಗಿ ಶೋಧ ಕಾರ್ಯ ಬುಧವಾರವೂ ಮುಂದು ವರಿಸಲಾಯಿತು. ಆದರೆ ಬಾಲಕಿಯ ಸುಳಿವು ಸಿಕ್ಕಿಲ್ಲ.
ಪರಿಹಾರ ಕಾರ್ಯಕ್ಕೆ ಬೊಮ್ಮಾಯಿ ಸೂಚನೆ
ಬೆಂಗಳೂರು: ರಾಜ್ಯದ ಕೆಲವೆಡೆ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡ ನಿಯೋಜಿಸಿ ರಕ್ಷಣ ಕಾರ್ಯ ಕೈಗೊಂಡು ಅನಂತರ ಪರಿಹಾರ ಕಾರ್ಯ ನಡೆಯಲಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.